ಬೆಂಗಳೂರು: ವಿವಾಹ ವಿಚ್ಛೇದನ ಕೋರಿ ಸಲ್ಲಿಸುವ ಅರ್ಜಿಗಳನ್ನು 1 ವರ್ಷದೊಳಗೆ ವಿಚಾರಣೆ ನಡೆಸಿ ಇತ್ಯರ್ಥಪಡಿಸಲು ಕೌಟುಂಬಿಕ ನ್ಯಾಯಾಲಯಗಳ ಎಲ್ಲ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಹೈಕೋರ್ಟ್ ಆದೇಶಿಸಿದೆ.
ವಿಹಾಹ ವಿಚ್ಛೇದನ ಕೋರಿ ಸಲ್ಲಿಸಿರುವ ಅರ್ಜಿಯನ್ನು 3 ತಿಂಗಳಲ್ಲಿ ತ್ವರಿತವಾಗಿ ವಿಚಾರಣೆ ನಡೆಸಿ ಇತ್ಯರ್ಥಪಡಿಸುವಂತೆ ಕೋರಿ ಬೆಂಗಳೂರಿನ ರಾಜೀವ್ ಎಂಬುವರು ಅರ್ಜಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾ. ಕೃಷ್ಣ ಎಸ್ ದೀಕ್ಷಿತ್ ಅವರಿದ್ದ ಪೀಠ ಈ ಮಹತ್ವದ ತೀರ್ಪು ನೀಡಿದೆ.
ಪೀಠ ತನ್ನ ತೀರ್ಪಿನಲ್ಲಿ, ಮನುಷ್ಯನ ಬದುಕು ತೀರಾ ಚಿಕ್ಕದು. ಅದು ಕಳೆದು ಹೋಗಬಾರದು. ಹೀಗಾಗಿ, ವಿವಾಹ ವಿಚ್ಛೇದನ ಕೋರಿ ಅರ್ಜಿಗಳನ್ನು ಸಲ್ಲಿಸಿದಾಗ ನ್ಯಾಯಾಲಯಗಳು ಸಮರೋಪಾದಿಯಲ್ಲಿ ವಿಚಾರಣೆ ನಡೆಸಿ ಶೀಘ್ರವಾಗಿ ಇತ್ಯರ್ಥಪಡಿಸಬೇಕು. ಇಂತಹ ಪ್ರಕರಣಗಳನ್ನು ತ್ವರಿತವಾಗಿ ಇತ್ಯರ್ಥಪಡಿಸಿದರೆ ಅರ್ಜಿದಾರರು ತಮ್ಮ ಮುಂದಿನ ಬದುಕು ಕಟ್ಟಿಕೊಳ್ಳಲು ಅನುಕೂಲವಾಗುತ್ತದೆ. ಇಲ್ಲದಿದ್ದಲ್ಲಿ ಇಬ್ಬರ ಜೀವನದ ಮೇಲೂ ಕೆಟ್ಟ ಪರಿಣಾಮಗಳು ಉಂಟಾಗುತ್ತವೆ ಎಂದು ಅಭಿಪ್ರಾಯಪಟ್ಟಿದೆ.
ಅಲ್ಲದೇ, ವಿವಾಹ ವಿಚ್ಛೇದನ ಕೋರಿ ಸಲ್ಲಿಸುವ ಅರ್ಜಿಗಳನ್ನು ಒಂದು ವರ್ಷದ ಒಳಗೇ ಇತ್ಯರ್ಥಪಡಿಸಲು ಕೌಟುಂಬಿಕ ನ್ಯಾಯಾಲಯಗಳು ಎಲ್ಲ ಅಗತ್ಯ ಪ್ರಯತ್ನಗಳನ್ನು ಮಾಡಬೇಕು ಮತ್ತು ಇತ್ಯರ್ಥಪಡಿಸಲು ಮುಂದಾಗಬೇಕು ಎಂದು ಹೈಕೋರ್ಟ್ ಆದೇಶಿಸಿದೆ.
ಇದೇ ವೇಳೆ ಪ್ರಕರಣದ ಅರ್ಜಿದಾರರು ವಿವಾಹ ವಿಚ್ಛೇದನ ಕೋರಿ 2016 ರಲ್ಲಿ ಸಲ್ಲಿಸಿರುವ ಅರ್ಜಿಯನ್ನು ಮುಂದಿನ 3 ತಿಂಗಳಲ್ಲಿ ಇತ್ಯರ್ಥಪಡಿಸುವಂತೆ ಬೆಂಗಳೂರಿನ ಕೌಟುಂಬಿಕ ನ್ಯಾಯಾಲಯಕ್ಕೆ ನಿರ್ದೇಶಿಸಿರುವ ಹೈಕೋರ್ಟ್, ಈ ಆದೇಶದ ಪ್ರತಿಯನ್ನು ಎಲ್ಲ ಕೌಟುಂಬಿಕ ನ್ಯಾಯಾಲಯಗಳಿಗೆ ರವಾನಿಸುವಂತೆ ತನ್ನ ರಿಜಿಸ್ಟ್ರಾರ್ ಜನರಲ್ ಗೆ ಆದೇಶಿಸಿದೆ.
(WRIT PETITION NO. 14769 OF 2023 (GM-FC)