ನವದೆಹಲಿ: ಅಕ್ರಮ ಆಸ್ತಿ ಗಳಿಕೆ ಸಂಬಂಧಿತ ಭ್ರಷ್ಟಾಚಾರ ಆರೋಪ ಪ್ರಕರಣದಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಸುಪ್ರೀಂ ಕೋರ್ಟ್ ನಲ್ಲೂ ರಿಲೀಫ್ ಸಿಕ್ಕಿದೆ.
ಡಿಕೆಶಿ ವಿರುದ್ಧದ ಸಿಬಿಐ ತನಿಖೆಗೆ ಮಧ್ಯಂತರ ತಡೆ ನೀಡಿರುವ ಕರ್ನಾಟಕ ಹೈಕೋರ್ಟ್ ಆದೇಶದಲ್ಲಿ ಮಧ್ಯಪ್ರವೇಶಿಸಲು ಸುಪ್ರೀಂ ಕೋರ್ಟ್ ಸೋಮವಾರ ನಿರಾಕರಿಸಿದೆ.
ನ್ಯಾಯಮೂರ್ತಿಗಳಾದ ಬಿ. ಆರ್, ಗವಾಯಿ, ಸಿ.ಟಿ. ರವಿಕುಮಾರ್ ಮತ್ತು ಸಂಜಯ್ ಕುಮಾರ್ ಅವರನ್ನೊಳಗೊಂಡ ಪೀಠವು, ಸಿಬಿಐ ಸಲ್ಲಿಸಿದ್ದ ಮೇಲ್ಮನವಿ ಪರಿಗಣಿಸಲು ನಿರಾಕರಿಸಿದೆ. ಪ್ರಕರಣದಲ್ಲಿ ಕರ್ನಾಟಕ ಹೈಕೋರ್ಟ್ ಫೆ.10 ರಂದು ನೀಡಿರುವ ಆದೇಶದಲ್ಲಿ ಮಧ್ಯಪ್ರವೇಶಿಸುವ ಅಗತ್ಯವಿಲ್ಲ ಎಂದು ಸ್ಪಷ್ಟವಾಗಿ ಹೇಳಿದೆ.
ಸಿಬಿಐ ತನಿಖೆಗೆ ಮಧ್ಯಂತರ ತಡೆ ನೀಡುವಂತೆ ಕೋರಿದ್ದ ಡಿ.ಕೆ. ಶಿವಕುಮಾರ್ ಅವರ ಅರ್ಜಿಯನ್ನು ಹೈಕೋರ್ಟ್ ಏಕ ಸದಸ್ಯ ಪೀಠ ಪುರಸ್ಕರಿಸಿತ್ತು. ಇದನ್ನು ಪ್ರಶ್ನಿಸಿ ಸಿಬಿಐ ಸುಪ್ರೀಂ ಕೋರ್ಟ್ ಗೆ ಮೇಲ್ಮನವಿ ಸಲ್ಲಿಸಿತ್ತು.
ತೀರ್ಪು ಕಾಯ್ದಿರಿಸಿದ ಹೈಕೋರ್ಟ್: ಆದಾಯ ಮೀರಿ ಆಸ್ತಿ ಗಳಿಕೆ ಆರೋಪ ಪ್ರಕರಣ ರದ್ದು ಕೋರಿ ಡಿಕೆಶಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ಪೂರ್ಣಗೊಳಿಸಿರುವ ಹೈಕೋರ್ಟ್ ತೀರ್ಪನ್ನು ಕಾಯ್ದಿರಿಸಿದೆ.
ಸೋಮವಾರ ಡಿಕೆಶಿ ಪರ ವಕೀಲರು ಹಾಗೂ ಸಿಬಿಐ ಪರ ವಕೀಲರ ವಾದ ಆಲಿಸಿದ ಹೈಕೋರ್ಟ್ ತೀರ್ಪು ಕಾಯ್ದಿರಿಸಿರುವುದಾಗಿ ತಿಳಿಸಿದೆ.
ವಿಚಾರಣೆ ವೇಳೆ ಡಿಕೆಶಿ ಪರ ವಕೀಲ ಸಿಬಿಐ ಅಧಿಕಾರಿಗಳು ಪ್ರಕರಣವನ್ನು ತಡವಾಗಿ ದಾಖಲಿದ್ದು, ಸ್ಪಷ್ಟನೆಗಾಗಿ ನ್ಯಾಯಾಲಯ ಕೇಸ್ ಡೈರಿ ಪರಿಶೀಲಿಸುವಂತೆ ಕೋರಿದರು. ಈ ಹಿನ್ನೆಲೆಯಲ್ಲಿ ಕೇಸ್ ಡೈರಿಯನ್ನು ಮುಚ್ಚಿದ ಲಕೋಟೆಯಲ್ಲಿ ನ್ಯಾಯಾಲಯಕ್ಕೆ ಸಲ್ಲಿಸಲು ಹೈಕೋರ್ಟ್ ಸೂಚಿಸಿದೆ.