ಬೆಂಗಳೂರು: ನಿವೇಶನಕ್ಕೆ ಸಂಬಂಧಿಸಿದ ಕಂದಾಯ ದಾಖಲೆಗಳನ್ನು ಬದಲಿಸುವುದಕ್ಕೆ ಭೂಮಾಲೀಕರೊಬ್ಬರಿಂದ 10 ಸಾವಿರ ರೂಪಾಯಿ ಲಂಚ ಸ್ವೀಕರಿಸಿದ ಆರೋಪ ಪ್ರಕರಣವನ್ನು ರದ್ದುಪಡಿಸಲು ಹೈಕೋರ್ಟ್ ನಿರಾಕರಿಸಿದೆ.
ಲೋಕಾಯುಕ್ತ ಪೊಲೀಸರು ತನ್ನ ವಿರುದ್ಧ ದಾಖಲಿಸಿರುವ ಎಫ್ಐಆರ್ ರದ್ದುಪಡಿಸಲು ಕೋರಿ ಚಿತ್ರದುರ್ಗ ಜಿಲ್ಲೆಯ ಬೆಳಗಟ್ಟ ಗ್ರಾಮ ಪಂಚಾಯಿತಿ ಪಿಡಿಒ ಸುರೇಶ್ ಹೆಬ್ಬಾಗಿಲು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಸ್.ವಿಶ್ವಜಿತ್ ಶೆಟ್ಟಿ ಅವರಿದ್ದ ನ್ಯಾಯಪೀಠ ಈ ಆದೇಶ ಮಾಡಿದೆ.
ಹೈಕೋರ್ಟ್ ತನ್ನ ತೀರ್ಪಿನಲ್ಲಿ, ಲಭ್ಯವಿರುವ ದಾಖಲೆಗಳನ್ನು ಪರಿಶೀಲಿಸಿದರೆ ಸುರೇಶ್ ಹೆಬ್ಬಾಗಿಲು ದೂರುದಾರರಿಗೆ ಲಂಚಕ್ಕೆ ಬೇಡಿಕೆಯಿಟ್ಟ ಮತ್ತು ಅವರಿಂದ ಲಂಚ ಸ್ವೀಕರಿಸಿದ ಆರೋಪದಲ್ಲಿ ಸತ್ಯಾಂಶವಿರುವಂತೆ ಮೇಲ್ನೋಟಕ್ಕೆ ತಿಳಿದು ಬರುತ್ತದೆ. ಆದ್ದರಿಂದ ಆರೋಪಿ ವಿರುದ್ಧ ಪ್ರಕರಣದ ತನಿಖೆ ಮುಂದುವರಿಯುವ ಅವಶ್ಯಕತೆ ಇದೆ. ಜತೆಗೆ, ಎಫ್‌ಐಆರ್ ರದ್ದುಪಡಿಸಲು ಯಾವುದೇ ಸಕಾರಣ ಇಲ್ಲ ಎಂದು ಅಭಿಪ್ರಾಯಪಟ್ಟು ಅರ್ಜಿ ವಜಾಗೊಳಿಸಿದೆ.
ಸ್ಥಿರಾಸ್ತಿಗೆ ಸಂಬಂಧಿಸಿದ ಕಂದಾಯ ದಾಖಲೆಗಳನ್ನು ಬದಲಿಸುವುದಕ್ಕೆ ಭೂ ಮಾಲೀಕನಿಂದ 10 ಸಾವಿರ ಲಂಚ ಪಡೆದ ಆರೋಪದಡಿ ಲೋಕಾಯುಕ್ತ ಪೊಲೀಸರು ಪಿಡಿಒ ಸುರೇಶ್ ಹೆಬ್ಬಾಗಿಲು ವಿರುದ್ಧ ಭ್ರಷ್ಟಾಚಾರ ತಡೆ ಕಾಯ್ದೆಯ ಸೆಕ್ಷನ್ 7ಎ ಅಡಿ ಎಫ್ಐಆರ್ ದಾಖಲಿಸಿದ್ದಾರೆ. ಈ ಪ್ರಕರಣ ರದ್ದು ಕೋರಿ ಪಿಡಿಒ ಹೈಕೋರ್ಟ್ ಮೊರೆ ಹೋಗಿದ್ದರು.
(CRL.P.NO. 5821/2023)