ಬೆಂಗಳೂರು: ಲೈಂಗಿಕ ಕಿರುಕುಳ ಹಾಗೂ ಸಂತ್ರಸ್ತ ಮಹಿಳೆಯ ಅಪಹರಣ ಆರೋಪ ಪ್ರಕರಣದಲ್ಲಿ ಮಾಜಿ ಸಚಿವ, ಶಾಸಕ ಎಚ್.ಡಿ ರೇವಣ್ಣ ಅವರನ್ನು ನ್ಯಾಯಾಲಯ 7 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
3 ದಿನಗಳ ಪೊಲೀಸ್ ಕಸ್ಟಡಿ ಅಂತ್ಯವಾದ ಹಿನ್ನೆಲೆಯಲ್ಲಿ ಎಸ್ಐಟಿ ಪೊಲೀಸರು ಆರೋಪಿ ರೇವಣ್ಣ ಅವರನ್ನು ಬೆಂಗಳೂರಿನ 17ನೇ ಎಸಿಎಂಎಂ ನ್ಯಾಯಾಲಯದ ನ್ಯಾಯಾಧೀಶ ರವೀಂದ್ರ ಕುಮಾರ್ ಬಿ. ಕಟ್ಟಿಮನಿ ಅವರ ಮುಂದೆ ಹಾಜರುಪಡಿಸಿದರು. ಬಳಿಕ ನ್ಯಾಯಾಲಯ ಆರೋಪಿಯನ್ನು ಮೇ 14ವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಆದೇಶಿಸಿತು.
ಮ್ಯಾಜಿಸ್ಟ್ರೇಟ್ ಕೋರ್ಟ್ ಮುಂದೆ ರೇವಣ್ಣ ಅವರನ್ನು ಹಾಜರುಪಡಿಸಿದ ವೇಳೆ ಎಸ್‌ಐಟಿ ಪರ ಹಾಜರಿದ್ದ ವಿಶೇಷ ಸರ್ಕಾರಿ ಅಭಿಯೋಜಕ ಬಿ.ಎನ್. ಜಗದೀಶ್, ಆರೋಪಿ ರೇವಣ್ಣ ತನಿಖೆಗೆ ಸಹಕರಿಸುತ್ತಿಲ್ಲ. ತನಿಖಾಧಿಕಾರಿಗಳು ಕೇಳಿದ ಪ್ರಶ್ನೆಗಳಿಗೆ ಹಾರಿಕೆ ಉತ್ತರಗಳನ್ನು ನೀಡುತ್ತಿದ್ದಾರೆ. ಹೀಗಾಗಿ, ಹೆಚ್ಚಿನ ತನಿಖೆಗೆ ಎಸ್‌ಐಟಿ ಕಸ್ಟಡಿಗೆ ನೀಡಬೇಕು ಎಂದು ಕೋರಿದರು.
ಇದಕ್ಕೆ ಪ್ರತಿಯಾಗಿ ರೇವಣ್ಣ ಪರ ಹಿರಿಯ ವಕೀಲ ಮೂರ್ತಿ ಡಿ. ನಾಯಕ್ ಆಕ್ಷೇಪ ವ್ಯಕ್ತಪಡಿಸಿದರು. ಈ ವೇಳೆ ನ್ಯಾಯಾಧೀಶರಿಗೆ ಮನವಿ ಮಾಡಿದ ರೇವಣ್ಣ ಅವರು, ತನಗೆ ಹೊಟ್ಟೆ ನೋವಿದ್ದರೂ ಅಧಿಕಾರಿಗಳು ಆಸ್ಪತ್ರೆಗೆ ಸೇರಿಸಿಲ್ಲ. ತನಿಖಾಧಿಕಾರಿಗಳು ಕೇಳಿರುವ ಎಲ್ಲಾ ಪ್ರಶ್ನೆಗಳಿಗೂ ಉತ್ತರಿಸಿದ್ದೇನೆ. ಮಹಿಳೆ ಅಪಹರಣ ದಿನ ನಾನು ಊರಿನಲ್ಲಿರಲಿಲ್ಲ. ಆ ಘಟನೆಯ ಬಗ್ಗೆ ಯಾವುದೇ ಮಾಹಿತಿ ಇಲ್ಲ. ಹೀಗಾಗಿ, ತನ್ನನ್ನು ಬಿಡುಗಡೆ ಮಾಡಬೇಕು ಎಂದು ಮನವಿ ಮಾಡಿದ್ದಾರೆ. ಅಂತಿಮವಾಗಿ ನ್ಯಾಯಾಲಯವು ರೇವಣ್ಣ ಅವರನ್ನು ಮೇ 14ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಆದೇಶಿಸಿದೆ.
ಇನ್ನು ರೆಗ್ಯುಲರ್ ಜಾಮೀನು ಕೋರಿ ರೇವಣ್ಣ ಅವರು ಸೆಷನ್ಸ್ ಕೋರ್ಟ್ ಗೆ ಸಲ್ಲಿಸಿರುವ ಅರ್ಜಿ ವಿಚಾರಣೆ ನಾಳೆಗೆ ಮುಂದೂಡಿಕೆಯಾಗಿದೆ. ಈ ಹಿನ್ನೆಲೆಯಲ್ಲಿ ಜಾಮೀನು ಸಿಗುವವರೆಗೂ ರೇವಣ್ಣ ಪರಪ್ಪನ ಅಗ್ರಹಾರ ಜೈಲಿನಲ್ಲಿಯೇ ಕಾಲ ಕಳೆಯಬೇಕಿದೆ.