News

ಸುಳ್ಳು ಸರ್ಟಿಫಿಕೇಟ್ ನೀಡಿ ಉದ್ಯೋಗ ಗಿಟ್ಟಿಸಿದ ಆರೋಪ: ಕೇಸ್ ರದ್ದುಪಡಿಸಿದ ಹೈಕೋರ್ಟ್

Share It

ಹುಟ್ಟಿನಿಂದ ಬ್ರಾಹ್ಮಣ ಸಮುದಾಯಕ್ಕೆ ಸೇರಿದ್ದರೂ ಪರಿಶಿಷ್ಟ ಪಂಗಡ ಜಾತಿ ಪ್ರಮಾಣಪತ್ರ ನೀಡಿ ಸರ್ಕಾರಿ ಉದ್ಯೋಗ ಗಿಟ್ಟಿಸಿದ್ದ ಆರೋಪದಡಿ ಮಹಿಳೆಯೊಬ್ಬರ ವಿರುದ್ಧ ದಾಖಲಿಸಿದ್ದ ಕ್ರಿಮಿನಲ್ ಪ್ರಕರಣವನ್ನು ಹೈಕೋರ್ಟ್ ರದ್ದುಪಡಿಸಿದೆ.

ತಮ್ಮ ವಿರುದ್ಧ ದಾಖಲಿಸಿರುವ ಕ್ರಿಮಿನಲ್ ಕೇಸ್ ರದ್ದುಪಡಿಸಬೇಕು ಎಂದು ಕೋರಿ ಬೆಂಗಳೂರಿನ ಮಹಿಳೆಯೊಬ್ಬರು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾ. ಕೆ. ನಟರಾಜನ್ ಅವರಿದ್ದ ಪೀಠ ಈ ತೀರ್ಪು ನೀಡಿದೆ.

ಪೀಠ ತನ್ನ ತೀರ್ಪಿನಲ್ಲಿ, ಅರ್ಜಿದಾರ ಮಹಿಳೆ ಮದುವೆಯಾದ ಆರಂಭದಲ್ಲಿಯೇ ಎಸ್ಟಿ ಜಾತಿ ಪ್ರಮಾಣ ಪತ್ರ ಪಡೆದಿದ್ದಾರೆ. ಅವರು ಉದ್ಯೋಗಕ್ಕಾಗಿ ಎಸ್‌ಟಿ ಜಾತಿ ಪ್ರಮಾಣಪತ್ರ ಪಡೆಯುವ ಕ್ರಿಮಿನಲ್ ಉದ್ದೇಶ ಹೊಂದಿರುವಂತೆ ಕಾಣುವುದಿಲ್ಲ. ಇನ್ನು, 1989ರಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ದೌರ್ಜನ್ಯ ತಡೆ ಕಾಯ್ದೆ ಜಾರಿಯಾಗುವ ಹಲವು ವರ್ಷಗಳ ಮುನ್ನವೇ ಅರ್ಜಿದಾರರು ಜಾತಿ ಪ್ರಮಾಣಪತ್ರ ಪಡೆದು ಉದ್ಯೋಗಕ್ಕೆ ಸೇರಿದ್ದಾರೆ. ಆ ಸಂದರ್ಭದಲ್ಲಿ ಜಾರಿಯಲ್ಲಿ ಇಲ್ಲದ ಕಾನೂನು ಬಳಸಿ ಈಗ ಅವರನ್ನು ಶಿಕ್ಷಿಸಲಾಗದು ಎಂದು ಅಭಿಪ್ರಾಯಪಟ್ಟು, ಪ್ರಕರಣವನ್ನು ರದ್ದುಪಡಿಸಿ ಆದೇಶಿಸಿದೆ.

ಪ್ರಕರಣದ ಹಿನ್ನೆಲೆ: ಮೂಲತಃ ಬ್ರಾಹ್ಮಣ ಸಮುದಾಯಕ್ಕೆ ಸೇರಿದ ಅರ್ಜಿದಾರ ಮಹಿಳೆ 1974ರಲ್ಲಿ ಪರಿಶಿಷ್ಟ ಪಂಗಡಕ್ಕೆ ಸೇರಿದ ನಾಯಕ ಜನಾಂಗದ ವ್ಯಕ್ತಿಯನ್ನು ವಿವಾಹವಾಗಿದ್ದರು. ನಂತರ ಎಸ್ಟಿ ಜಾತಿ ಪ್ರಮಾಣಪತ್ರ ಪಡೆದು, ಮೀಸಲು ಕೋಟಾದಡಿ ಎಸ್‌ಡಿಎ ಆಗಿ ಸರ್ಕಾರಿ ಸೇವೆಗೆ ಸೇರಿಕೊಂಡಿದ್ದರು. ಜಾತಿ ಪ್ರಮಾಣ ಪತ್ರ ಪರಿಶೀಲನೆ ವೇಳೆ ಮಹಿಳೆ ಮೂಲತಃ ಬ್ರಾಹ್ಮಣ ಸಮುದಾಯಕ್ಕೆ ಸೇರಿರುವುದು ಕಂಡುಬಂದಿತ್ತು.

ಈ ಹಿನ್ನೆಲೆಯಲ್ಲಿ ಎಸ್ಟಿ ಜಾತಿ ಪ್ರಮಾಣ ಪತ್ರ ರದ್ದುಗೊಳಿಸಿದ್ದ ಸರ್ಕಾರ 2012ರಲ್ಲಿ ಪತಿಯ ಜಾತಿಯನ್ನು ಪತ್ನಿಗೆ ಅನ್ವಯಿಸಲಾಗದು ಹಾಗೂ ಎಸ್ಟಿ ಪ್ರಮಾಣ ಪತ್ರ ನೀಡಲಾಗದು ಎಂದು ತಿಳಿಸಿ ಮಹಿಳೆಯನ್ನು ನೌಕರಿಯಿಂದ ವಜಾಗೊಳಿಸಿತ್ತು. ನಂತರ, ಎಸ್ಸಿ-ಎಸ್ಟಿ ದೌರ್ಜನ್ಯ ತಡೆ ಕಾಯ್ದೆ ಅಡಿ ಹಾಗೂ ಸುಳ್ಳು ಜಾತಿ ಪ್ರಮಾಣ ಪತ್ರ ಪಡೆದ ಆರೋಪದಡಿ ಕ್ರಿಮಿನಲ್ ಕೇಸ್ ದಾಖಲಿಸಲಾಗಿತ್ತು. ಈ ಪ್ರಕರಣವನ್ನು ತುಮಕೂರಿನ ನ್ಯಾಯಾಲಯ ವಿಚಾರಣೆ ನಡೆಸುತ್ತಿದ್ದು, ತಮ್ಮ ವಿರುದ್ಧದ ಕೇಸ್ ರದ್ದುಪಡಿಸುವಂತೆ ಕೋರಿ ಮಹಿಳೆ ಹೈಕೋರ್ಟ್ ಮೆಟ್ಟಿಲೇರಿದ್ದರು.

(CRL.P 8857/2018)


Share It

You cannot copy content of this page