ಬೆಂಗಳೂರು: ಜೆಡಿಎಸ್ ರಾಜ್ಯ ಘಟಕದ ಅಧ್ಯಕ್ಷ ಸ್ಥಾನದಿಂದ ಸಿಎಂ ಇಬ್ರಾಹಿಂ ಅವರನ್ನು ಉಚ್ಚಾಟಿಸಿರುವ ಪ್ರಕರಣ ಸಂಬಂಧ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ ದೇವೇಗೌಡ ಮತ್ತು ಎಚ್.ಡಿ ಕುಮಾರಸ್ವಾಮಿ ಅವರಿಗೆ ಹೈಕೋರ್ಟ್ ನೋಟಿಸ್ ಜಾರಿಗೊಳಿಸಿದೆ.
ತಮ್ಮನ್ನು ಉಚ್ಚಾಟಿಸಿರುವ ಮತ್ತು ಅಧ್ಯಕ್ಷ ಹುದ್ದೆಗೆ ತಾತ್ಕಾಲಿಕವಾಗಿ ಎಚ್‌ಡಿ ಕುಮಾರಸ್ವಾಮಿ ಅವರನ್ನು ನೇಮಿಸಿರುವ ಕ್ರಮ ಪ್ರಶ್ನಿಸಿ ಸಿ.ಎಂ. ಇಬ್ರಾಹಿಂ ಸಲ್ಲಿಸಿದ್ದ ಮೂಲ ದಾವೆಯನ್ನು ನಗರದ ಸಿಟಿ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ತಿರಸ್ಕರಿಸಿತ್ತು. ಈ ಆದೇಶ ರದ್ದು ಕೋರಿ ಸಿ.ಎಂ. ಇಬ್ರಾಹಿಂ ಸಲ್ಲಿಸಿದ್ದ ಮೇಲ್ಮನವಿಯನ್ನು ನ್ಯಾ.ಸಿ.ಎಂ. ಪೂಣಚ್ಚ ಅವರಿದ್ದ ನ್ಯಾಯಪೀಠ ವಿಚಾರಣೆ ನಡೆಸಿತು.
ಕೆಲ ಕಾಲ ವಾದ-ಪ್ರತಿವಾದ ಆಲಿಸಿದ ನ್ಯಾಯಪೀಠ, ಮೇಲ್ಮನವಿಯಲ್ಲಿನ ಪ್ರತಿವಾದಿಗಳಿಗೆ ನೋಟಿಸ್ ಜಾರಿಗೊಳಿಸಿ ವಿಚಾರಣೆ ಮುಂದೂಡಿತು. ಜೆಡಿಎಸ್ ಪರ ಹಾಜರಾದ ಹಿರಿಯ ವಕೀಲ ಉದಯ ಹೊಳ್ಳ, ಅರ್ಜಿಗೆ ಆಕ್ಷೇಪಣೆ ಸಲ್ಲಿಸಿದರು. ಅದನ್ನು ದಾಖಲಿಸಿಕೊಂಡ ನ್ಯಾಯಪೀಠ, ಮೇಲ್ಮನವಿ ವಿಚಾರಣೆಯನ್ನು ಜೂನ್ 4ಕ್ಕೆ ಮುಂದೂಡಿತು.
ಪಕ್ಷ ವಿರೋಧಿ ಚಟುವಟಿಕೆಗಳ ಆರೋಪ ಹಿನ್ನೆಲೆಯಲ್ಲಿ ಸಿಎಂ ಇಬ್ರಾಹಿಂ ಅವರನ್ನು ಜಾತ್ಯತೀತ ಜನತಾದಳ ಪಕ್ಷದಿಂದ ಉಚ್ಚಾಟನೆ ಮಾಡಿ, ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಹೆಚ್.ಡಿ ದೇವೇಗೌಡ ಅವರು ಕೆಲ ತಿಂಗಳುಗಳ ಹಿಂದೆ ಆದೇಶ ಹೊರಡಿಸಿದ್ದರು.