ಬೆಂಗಳೂರು: ಕಾಂಗೆಸ್ ಅಧಿಕಾರಕ್ಕೆ ಬಂದರೆ, ಅದು ದೇಶದ ಜನರ ಸಂಪತ್ತನ್ನು ಮುಸ್ಲಿಮರಿಗೆ ಮರು ಹಂಚಿಕೆ ಮಾಡುತ್ತದೆ ಎಂದು ಹೇಳುವ ಮೂಲಕ ಹಾಗೂ ಮುಸ್ಲಿಮರನ್ನು ನುಸುಳುಕೋರರು ಎಂದು ಕರೆಯುವ ಮೂಲಕ ಪ್ರಧಾನಿ ನರೇಂದ್ರ ಮೋದಿ ಧಾರ್ಮಿಕ ದ್ವೇಷ ಹರಡಿದ್ದಾರೆ ಎಂದು ಆರೋಪಿಸಿ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಮ್ಯಾಜಿಸ್ಟ್ರೇಟ್ ನ್ಯಾಯಾಲಯದಲ್ಲಿ ಖಾಸಗಿ ದೂರು ದಾಖಲಿಸಲಾಗಿದೆ.
ಬೆಂಗಳೂರಿನ ಹೆಬ್ಬಾಳದ ನಿವಾಸಿ 32 ವರ್ಷದ ಜಿಯಾವುರ್ ರಹಮಾನ್ ನೊಮಾನಿ ಬೆಂಗಳೂರಿನ 42ನೇ ಹೆಚ್ಚುವರಿ ಮೆಟ್ರೊಪಾಲಿಟನ್ ಮ್ಯಾಜಿಸ್ಟ್ರೇಟ್ ನ್ಯಾಯಾಲಯದಲ್ಲಿ ಮೇ 23ರಂದು ಖಾಸಗಿ ದೂರು ದಾಖಲಿಸಿದ್ದಾರೆ.
ದೂರಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಕಳೆದ ತಿಂಗಳು ಚುನಾವಣಾ ಪ್ರಚಾರದಲ್ಲಿ ಭಾಷಣ ಮಾಡುವ ವೇಳೆ ಮುಸ್ಲಿಮರನ್ನು ನಿಂದಿಸಿದ್ದಾರೆ. 2024ರ ಏಪ್ರಿಲ್ 21ರಂದು ರಾಜಸ್ಥಾನದಲ್ಲಿ ಬನ್ಸ್ವಾರದಲ್ಲಿನ ನಡೆದ ಚುನಾವಣಾ ಸಮಾವೇಶದಲ್ಲಿ ಮೋದಿ ಮಾತನಾಡಿ, ಕಾಂಗ್ರೆಸ್ ಪ್ರಣಾಳಿಕೆಯು ದೇಶದ ತಾಯಂದಿರು, ಸಹೋದರಿಯರ ಬಂಗಾರ ಲೆಕ್ಕ ಹಾಕುವುದಾಗಿ, ಅದರ ಬಗ್ಗೆ ಮಾಹಿತಿ ಪಡೆಯುವುದಾಗಿ, ನಂತರ ಸಂಪತ್ತನ್ನು ಮರು ಹಂಚಿಕೆ ಮಾಡುವುದಾಗಿ ಹೇಳುತ್ತದೆ. ಅದನ್ನು ಯಾರಿಗೆ ಹಂಚುತ್ತಾರೆ? ಮುಸ್ಲಿಮರು ದೇಶದ ಸಂಪತ್ತಿನ ಮೊದಲ ಹಕ್ಕುದಾರರು ಎಂದು ಹಿಂದಿನ ಕಾಂಗ್ರೆಸ್ ಸರ್ಕಾರ ಹೇಳಿತ್ತು. ಅದರ ಅರ್ಥ, ಹೆಚ್ಚು ಮಕ್ಕಳಿರುವವರಿಗೆ ನಿಮ್ಮ ಸಂಪತ್ತು ಹಂಚಿಕೆಯಾಗುತ್ತದೆ. ನುಸುಳುಕೋರರಿಗೆ ನಿಮ್ಮ ಸಂಪತ್ತು ಹಂಚಿಕೆಯಾಗುತ್ತದೆ. ನೀವು ಕಷ್ಟದಿಂದ ಸಂಪಾದಿಸಿದ ಹಣ ನುಸುಳುಕೋರರ ಪಾಲಾಗಬೇಕೆ? ಅದಕ್ಕೆ ನಿಮ್ಮ ಒಪ್ಪಿಗೆ ಇದೆಯೇ ಎಂದು ಭಾಷಣ ಮಾಡಿದ್ದರು.
ಈ ದೇಶದ ಸಂಪತ್ತನ್ನು ಮುಸ್ಲಿಮರನ್ನು ಹಂಚಿಕೆ ಮಾಡಲಾಗುತ್ತದೆ ಎಂದು ಹೇಳುವ ಮೂಲಕ ಮತ್ತು ಮುಸ್ಲಿಮರನ್ನು ನುಸುಳುಕೋರರಿಗೆ ಹೋಲಿಕೆ ಮಾಡುವ ಮೂಲಕ ಸಮಾಜದಲ್ಲಿ ದ್ವೇಷ ಹರಡಿದ, ಸಾರ್ವಜನಿಕ ಶಾಂತಿಗೆ ಭಂಗ ಉಂಟು ಮಾಡಿದ್ದಾರೆ. ಹೀಗಾಗಿ ಪ್ರಧಾನಿ ಮೋದಿ ವಿರುದ್ಧ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 153ಎ, 153ಬಿ, 295ಎ, 503, 504, 505(2) ಅಡಿ ಪ್ರಕರಣ ದಾಖಲಿಸಿ, ತನಿಖೆ ನಡೆಸಲು ಪೊಲೀಸರಿಗೆ ನಿರ್ದೇಶಿಸುವಂತೆ ಖಾಸಗಿ ದೂರಿನಲ್ಲಿ ಮನವಿ ಮಾಡಿದ್ದಾರೆ.
ಅಲ್ಲದೇ, ಇಂತಹ ಭಾಷಣ ಮಾಡುವವರ ವಿರುದ್ಧ ಪೊಲೀಸರು ಕ್ರಮಕೈಗೊಳ್ಳಲು ವಿಫಲವಾಗಿರುವುದರಿಂದಲೇ ಮುಸ್ಲಿಂ ಸಮುದಾಯದ ಸುರಕ್ಷತೆಗೆ ಬೆದರಿಕೆ ತಂದೊಡ್ಡಿದೆ. ಪ್ರಧಾನಿ ಭಾಷಣ ಸಾಂವಿಧಾನಿಕ ಮೌಲ್ಯಗಳಾದ ಭ್ರಾತೃತ್ವ, ಏಕತೆ ಮತ್ತು ಸಮಗ್ರತೆ ಮೇಲಿನ ನೇರ ದಾಳಿಯಲ್ಲದೇ ಬೇರೇನೂ ಅಲ್ಲ. ದ್ವೇಷ ಭಾಷಣದ ಮೂಲಕ ಪ್ರಧಾನಿ ಮೋದಿ ಸಂವಿಧಾನದ 14, 17 ಮತ್ತು 51ಎ ವಿಧಿಗಳನ್ನು ಉಲ್ಲಂಘಿಸಿದ್ದಾರೆ ಎಂದು ಅರ್ಜಿಯಲ್ಲಿ ಆರೋಪಿಸಿದ್ದಾರೆ.
ಪ್ರಧಾನಿ ಮೋದಿ ದ್ವೇಷ ಭಾಷಣದ ವಿಡಿಯೊ ಮಾಧ್ಯಮಗಳಲ್ಲಿ ವ್ಯಾಪಕ ಪ್ರಸಾರವಾಗಿದ್ದು ಈ ಕುರಿತಂತೆ ಏಪ್ರಿಲ್ 26ರಂದು ಅಮೃತಹಳ್ಳಿ ಠಾಣೆಗೆ ದೂರು ನೀಡಿದ್ದೆವು. ಆದರೆ, ಅಮೃತಹಳ್ಳಿ ಪೊಲೀಸರು ಇದು ಭಾರತೀಯ ಚುನಾವಣಾ ಆಯೋಗದ ವ್ಯಾಪ್ತಿಗೆ ಒಳಪಡುವುದರಿಂದ ಎಫ್‌ಐಆರ್ ದಾಖಲಿಸಲಾಗದು ಎಂದು ಹಿಂಬರಹ ನೀಡಿದ್ದರು. ಏಪ್ರಿಲ್ 27ರಂದು ದೂರುದಾರರು ಈಮೇಲ್ ಮೂಲಕ ಬೆಂಗಳೂರು ಪೊಲೀಸ್ ಆಯುಕ್ತರಿಗೆ ದೂರು ನೀಡಿದ್ದರೂ ಕ್ರಮ ಕೈಗೊಂಡಿಲ್ಲ. ಈ ಹಿನ್ನೆಲೆಯಲ್ಲಿ ನ್ಯಾಯಾಲಯಕ್ಕೆ ಖಾಸಗಿ ದೂರು ಸಲ್ಲಿಸಲಾಗಿದೆ ಎಂದು ಪಿಸಿಆರ್ ನಲ್ಲಿ ವಿವರಿಸಲಾಗಿದೆ. ಇದೇ ಮೇ 28ಕ್ಕೆ ಅರ್ಜಿ ವಿಚಾರಣೆ ನಿಗದಿಯಾಗಿದೆ.
(PCR 7024/2024)