ಬೆಂಗಳೂರು: ಇತ್ತೀಚಿನ ದಿನಗಳಲ್ಲಿ ಪೊಲೀಸರ ವಿರುದ್ಧ ಧರಣಿ ಮಾಡುವುದು, ಅವರ ಮೇಲೆ ಕಲ್ಲು ಎಸೆಯುವುದು, ಕರ್ತವ್ಯಕ್ಕೆ ಅಡ್ಡಿಪಡಿಸುವುದು ಸಾಮಾನ್ಯವಾಗಿದೆ. ಪೊಲೀಸರನ್ನು ನಾವು ರಕ್ಷಣೆ ಮಾಡದಿದ್ದರೆ, ಅವರು ಕೆಲಸ ಸಲ್ಲಿಸುವುದಾದರೂ ಹೇಗೆ ಎಂದು ಹೈಕೋರ್ಟ್ ಮೌಖಿಕವಾಗಿ ಪ್ರಶ್ನಿಸಿದೆ.
ಅಕ್ರಮ ಗಣಿಗಾರಿಕೆ ಆರೋಪದಡಿ ಬೆಂಬಲಿಗನನ್ನು ಬಂಧಿಸಿದ ಪೊಲೀಸರಿಗೆ ನಿಂದಿಸಿದ ಹಾಗೂ ಕರ್ತವ್ಯಕ್ಕೆ ಅಡ್ಡಿಪಡಿಸಿದ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಅವರ ನಡೆಯನ್ನು ಪ್ರಶ್ನಿಸುವ ವೇಳೆ ಹೈಕೋರ್ಟ್ ಮೇಲಿನಂತೆ ಅಭಿಪ್ರಾಯಪಟ್ಟಿದೆ.
ತಮ್ಮ ವಿರುದ್ಧ ಪೊಲೀಸರು ದಾಖಲಿಸಿರುವ ಪ್ರಕರಣವನ್ನು ರದ್ದುಪಡಿಸುವಂತೆ ಕೋರಿ ಶಾಸಕ ಹರೀಶ್ ಪೂಂಜ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಕೃಷ್ಣ ಎಸ್ ದೀಕ್ಷಿತ್ ಅವರಿದ್ದ ನ್ಯಾಯಪೀಠ, ಶಾಸಕರ ನಡವಳಿಕೆಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ.
ವಿಚಾರಣೆ ವೇಳೆ ಶಾಸಕರ ನಡೆಯನ್ನು ಕಟುವಾಗಿ ಪ್ರಶ್ನಿಸಿರುವ ನ್ಯಾಯಪೀಠ, ಪೊಲೀಸರು ಯಾವುದೇ ವ್ಯಕ್ತಿಯನ್ನು ಬಂಧಿಸಿದಾಗ ಸ್ಥಳೀಯ ಮ್ಯಾಜಿಸ್ಟ್ರೇಟ್ ನ್ಯಾಯಾಲಯದ ಮೊರೆ ಹೋಗಬಹುದು. ಅಕ್ರಮ ಬಂಧನ ಮಾಡಿದ್ದಲ್ಲಿ ಹೆಬಿಯಾಸ್ ಕಾರ್ಪಸ್ ಅರ್ಜಿ ಸಲ್ಲಿಸಿ ಪರಿಹಾರ ಕಂಡುಕೊಳ್ಳಬಹುದು. ಆದರೆ, ಜನಪ್ರತಿನಿಧಿ ಎಂಬ ಕಾರಣಕ್ಕೆ ಠಾಣೆ ಮುಂದೆ ಹೋಗಿ ಪ್ರತಿಭಟನೆ ನಡೆಸುವುದು ಎಷ್ಟು ಸರಿ? ಎಂದು ಹೈಕೋರ್ಟ್ ಪ್ರಶ್ನಿಸಿದೆ.
ಅಲ್ಲದೆ, ಜನಪ್ರತಿನಿಧಿಯಾದವರು ಯಾವುದೋ ವ್ಯಕ್ತಿಯನ್ನು ಬಂಧಿಸಿದಲ್ಲಿ ಪೊಲೀಸ್ ಠಾಣೆಗೆ ಹೋಗುವುದು ಎಷ್ಟು ಸರಿ. ಭಯೋತ್ಪಾದಕನನ್ನು ಪೊಲೀಸರು ಬಂಧಿಸುತ್ತಾರೆ. ಅವನ ಪತ್ನಿ ಬಂದು ನನ್ನ ಪತಿ ಅತ್ಯುತ್ತಮ ವ್ಯಕ್ತಿಯಾಗಿದ್ದಾರೆ. ಅವರನ್ನು ಪೊಲೀಸರು ಬಂಧಿಸಿದ್ದಾರೆ ಎಂದರೆ ತಕ್ಷಣ ಜನಪ್ರತಿನಿಧಿ ಪೊಲೀಸ್ ಠಾಣೆಗೆ ಹೋಗಲು ಸಾಧ್ಯವೇ? ಯಾವುದೇ ವ್ಯಕ್ತಿಯನ್ನು ಬಂಧಿಸಿದಲ್ಲಿ ಕಾನೂನು ಪ್ರಕಾರ ಪ್ರಕ್ರಿಯೆ ನಡೆಸಬೇಕು. ಅದಕ್ಕೆ ಬದಲಾಗಿ ಶಾಸಕರಾದವರು ಠಾಣೆಗೆ ಹೋದರೆ ಪೊಲೀಸರು ತಮ್ಮ ಸೇವೆ ಸಲ್ಲಿಸುವುದಾದರೂ ಹೇಗೆ? ಎಂದು ಹೈಕೋರ್ಟ್ ಅಸಮಾಧಾನ ವ್ಯಕ್ತಪಡಿಸಿದೆ.
ಹಾಗೆಯೇ, ಶಾಸಕರು ತಾವು ಮಾಡುವ ಕೆಲಸವನ್ನು ಮಾಡಬೇಕು. ಅದರ ಬದಲಾಗಿ ನ್ಯಾಯಾಲಯದ ಕೆಲಸ ಮಾಡುವುದಕ್ಕೆ ಮುಂದಾಗಬೇಡಿ. ಮುಂದೊಂದು ದಿನ ನ್ಯಾಯಾಧೀಶರು ಹೇಗೆ ಕೆಲಸ ಮಾಡುತ್ತಿದ್ದಾರೆ ಎಂದು ನಮ್ಮ ಹಿಂದೆ ಬಂದು ಕೂತರೆ ನಾವೆಲ್ಲರೂ ಹೇಗೆ ಕೆಲಸ ಮಾಡಬೇಕು? ಈ ರೀತಿಯ ವರ್ತನೆಯನ್ನು ಸಹಿಸಲಾಗುವುದಿಲ್ಲ ಎಂದು ಪೀಠ ಶಾಸಕರ ನಡೆಗೆ ಆಕ್ರೋಶ ವ್ಯಕ್ತಪಡಿಸಿದೆ.
ಕೊನೆಯಲ್ಲಿ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದ ಹೈಕೋರ್ಟ್, ಮುಂದಿನ ವಿಚಾರಣೆಯವರೆಗೂ ಅರ್ಜಿದಾರರ ವಿರುದ್ಧ ಬಲವಂತದ ಕ್ರಮ ಕೈಗೊಳ್ಳದಂತೆ ಸೂಚಿಸಿ ವಿಚಾರಣೆ ಮುಂದೂಡಿದೆ.
ವಿಚಾರಣೆ ವೇಳೆ ಅರ್ಜಿದಾರರ ಪರ ವಾದ ಮಂಡಿಸಿದ ಪ್ರಭುಲಿಂಗ ನಾವಡಗಿ, ”ಬಿಜೆಪಿ ಯುವ ಮೋರ್ಚಾದ ಶಶಿರಾಜ್ ಶೆಟ್ಟಿ ಅವರನ್ನು ಪೊಲೀಸರು ಅಕ್ರಮ ಗಣಿಗಾರಿಕೆ ಆರೋಪದಲ್ಲಿ ಬಂಧಿಸಿ ಎಫ್‌ಐಆರ್ ದಾಖಲಿಸಿಕೊಂಡಿದ್ದರು. ಈ ಸಂಬಂಧ ಬಂಧಿತನ ಪತ್ನಿ ಅರ್ಜಿದಾರರಿಗೆ ಕರೆ ಮಾಡಿ ವಿಷಯ ತಿಳಿಸಿದರು. ತಕ್ಷಣ ಬೆಳ್ತಂಗಡಿ ಠಾಣೆಗೆ ಬಂದ ಅರ್ಜಿದಾರ(ಶಾಸಕ)ರು ರಾತ್ರಿ 11.30ಕ್ಕೆ ಭೇಟಿ ನೀಡಿ, ಯಾವ ಕಾರಣಕ್ಕೆ ಎಫ್‌ಐಆರ್ ಆಗಿದೆ ಎಂದು ಪ್ರಶ್ನಿಸಿದರು. ಆಗ ಪೊಲೀಸರು ಸೂಕ್ತ ಉತ್ತರ ನೀಡಿದ ಕಾರಣ ಧ್ವನಿಯನ್ನು ಜೋರು ಮಾಡಿ ಮಾತನಾಡಿದ್ದರು” ಎಂದು ತಿಳಿಸಿದರು.
ಪ್ರಕರಣದ ಹಿನ್ನೆಲೆ: ಅಕ್ರಮ ಗಣಿಗಾರಿಕೆಯಲ್ಲಿ ತೊಡಗಿದ್ದ ಆರೋಪದಲ್ಲಿ ಪೊಲೀಸರು ಶಶಿರಾಜ್ ಶೆಟ್ಟಿ ಎಂಬುವರನ್ನು ಬಂಧಿಸಿದ್ದರು. ಇದರಿಂದ ಸಿಟ್ಟಾಗಿದ್ದ ಅರ್ಜಿದಾರರಾದ ಬಿಜೆಪಿ ಶಾಸಕ ಹರೀಶ್ ಪೂಂಜ ಠಾಣೆಗೆ ಭೇಟಿ ನೀಡಿ ಪೊಲೀಸ್ ಅಧಿಕಾರಿಗಳ ವಿರುದ್ಧ ಅವಾಚ್ಯವಾಗಿ ನಿಂದಿಸಿ, ಬೆದರಿಕೆ ಒಡ್ಡಿದ್ದಾರೆ ಎಂದು ಆರೋಪಿಸಲಾಗಿದೆ. ಅಲ್ಲದೆ, ಸರ್ಕಾರಿ ಅಧಿಕಾರಿಯ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದಾರೆ ಎಂಬ ಆರೋಪದ ಪೊಲೀಸರು ಎರಡು ಎಫ್‌ಐಆರ್ ದಾಖಲಿಸಿದ್ದಾರೆ. ಇವುಗಳನ್ನು ರದ್ದುಪಡಿಸುವಂತೆ ಕೋರಿ ಶಾಸಕ ಹರೀಶ್ ಪೂಂಜ ಹೈಕೋರ್ಟ್ ಮೆಟ್ಟಿಲೆರಿದ್ದಾರೆ.