ಬೆಂಗಳೂರು: ಕೊಲೆ ಆರೋಪ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿರುವ ನಟ ದರ್ಶನ್ ಮತ್ತಿತರರನ್ನು ಹೆಚ್ಚಿನ ವಿಚಾರಣೆಗಾಗಿ ಮತ್ತೊಮ್ಮೆ ಪೊಲೀಸರ ವಶಕ್ಕೆ ನೀಡಿ ನ್ಯಾಯಾಲಯ ಆದೇಶಿಸಿದೆ.
ಇದೇ ವೇಳೆ ಪ್ರಕರಣದ ಮೊದಲನೇ ಆರೋಪಿಯಾಗಿರುವ ಪವಿತ್ರಾಗೌಡಗೆ ನ್ಯಾಯಾಂಗ ಬಂಧನ ವಿಧಿಸಿದೆ. ಕೋರ್ಟ್ ಆದೇಶದಂತೆ ಪವಿತ್ರಾ ಗೌಡ ಹಾಗೂ ಇತರರು ಪರಪ್ಪನ ಅಗ್ರಹಾರದ ಕೇಂದ್ರ ಕಾರಾಗೃಹ ಸೇರಿದ್ದಾರೆ.
ರೇಣುಕಾಸ್ವಾಮಿ ಕೊಲೆ ಆರೋಪ ಪ್ರಕರಣದಲ್ಲಿ ದರ್ಶನ್ ಮತ್ತು ಅವರ ಬೆಂಬಲಿಗರನ್ನು ಬಂಧಿಸಿದ್ದ ಪೊಲೀಸರು, ಹೆಚ್ಚಿನ ವಿಚಾರಣೆಗಾಗಿ 10 ದಿನಗಳ ಕಾಲ ತಮ್ಮ ವಶಕ್ಕೆ ಪಡೆದಿದ್ದರು. ಅವಧಿ ಮುಗಿದ ಹಿನ್ನೆಲೆಯಲ್ಲಿ ಪೊಲೀಸರು ಆರೋಪಿತರನ್ನು ಬೆಂಗಳೂರಿನ 24ನೇ ಎಸಿಎಂಎಂ ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದರು. ನ್ಯಾಯಾಲಯ ದರ್ಶನ್ ಸೇರಿ 4 ಮಂದಿ ಆರೋಪಿತರನ್ನು ಹೊರತುಪಡಿಸಿ ಉಳಿದವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಆದೇಶಿಸಿದೆ.
ನಟ ದರ್ಶನ್, ಧನರಾಜ್, ನಾಗರಾಜ್, ವಿನಯ್, ಪ್ರದೋಶ್, ಲಕ್ಷ್ಮಣ್ ಅವರನ್ನು ಹೆಚ್ಚಿನ ವಿಚಾರಣೆಗಾಗಿ ಪೊಲೀಸ್ ಕಸ್ಟಡಿಗೆ ಕೊಡುವಂತೆ ವಿಶೇಷ ಸರ್ಕಾರಿ ಅಭಿಯೋಜಕರು ಮನವಿ ಮಾಡಿದ್ದರು. ತನಿಖೆ ವೇಳೆ ಆರೋಪಿತರ ವಿರುದ್ಧ ಮತ್ತಷ್ಟು ಮಾಹಿತಿ ಸಿಕ್ಕಿದ್ದು ಹೆಚ್ಚಿನ ತನಿಖೆ ಅಗತ್ಯವಿದೆ. ಕೆಲ ಆರೋಪಿಗಳು ತನಿಖೆಗೆ ಸೂಕ್ತ ಸಹಕಾರ ನೀಡುತ್ತಿಲ್ಲ ಎಂದು ವಾದ ಮಂಡಿಸಿದ್ದರು.
ಈ ಹಿನ್ನೆಲೆಯಲ್ಲಿ ದರ್ಶನ್ ಹಾಗೂ ಇತರೆ ಆರೋಪಿತರನ್ನು ಹೆಚ್ಚಿನ ವಿಚಾರಣೆಗಾಗಿ ಪೊಲೀಸ್ ವಶಕ್ಕೆ ನೀಡಲಾಗಿದೆ. ಉಳಿದಂತೆ ಪ್ರಕರಣದ ಮೊದಲ ಆರೋಪಿ ಪವಿತ್ರಾ ಗೌಡ, ಪವನ್, ವಾಹನ ಚಾಲಕ ರವಿಶಂಕರ್, ಚಿತ್ರದುರ್ಗದಿಂದ ಕಿಡ್ನಾಪ್ ಮಾಡಲು ಸಹಕರಿಸಿದ್ದ ಅನುಕುಮಾರ್, ನಿಖಿಲ್ ನಾಯ್ಕ್ ಸೇರಿದಂತೆ ಉಳಿದೆಲ್ಲ ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.