ದೆಹಲಿ: ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ವಿರುದ್ಧದ ಅಕ್ರಮ ಆಸ್ತಿ ಗಳಿಕೆ ಆರೋಪಕ್ಕೆ ಸಂಬಂಧಿಸಿದಂತೆ ಸಿಬಿಐ ತನಿಖೆ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿ ಆದೇಶಿಸಿದೆ.
ಭ್ರಷ್ಟಾಚಾರ ತಡೆ ಕಾಯ್ದೆ ಅಡಿ ತನಿಖೆ ನಡೆಸಲು ಸಿಬಿಐಗೆ ಅನುಮತಿ ನೀಡಿದ್ದ ಬಿಜೆಪಿ ಸರ್ಕಾರದ ನಿರ್ಧಾರ ಪ್ರಶ್ನಿಸಿ ಡಿಕೆ ಶಿವಕುಮಾರ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾ. ಬೆಲಾ ಎಂ ತ್ರಿವೇದಿ ಹಾಗೂ ನ್ಯಾ. ಸತೀಶ್ ಚಂದ್ರ ಶರ್ಮಾ ಅವರಿದ್ದ ಪೀಠ ಈ ತೀರ್ಪು ನೀಡಿದೆ.
ವಿಚಾರಣೆ ವೇಳೆ ನ್ಯಾಯಪೀಠ, ಸಿಬಿಐ ತನಿಖೆಗೆ ಅನುಮತಿ ನೀಡಿ ರಾಜ್ಯ ಸರ್ಕಾರ ಹೊರಡಿಸಿರುವ ಆದೇಶನ್ನು ಹೈಕೋರ್ಟ್ ಹೇಗೆ ತಡೆಯಿತು ಎಂದು ಪ್ರಶ್ನಿಸಿತು. ಇದಕ್ಕೆ ಡಿಕೆಶಿ ಪರ ವಕೀಲರು, ಡಿಕೆ ಶಿವಕುಮಾರ್ ವಿರುದ್ಧ ತನಿಖೆ ನಡೆಸಲು ಸಿಬಿಐಗೆ ಸಮ್ಮತಿಸಿದ್ದ ಆದೇಶವನ್ನು ಸರ್ಕಾರ ಹಿಂಪಡೆದಿದೆ ಎಂದು ತಿಳಿಸಿದರು. ಜತೆಗೆ ಈ ಹಿಂದಿನ ತೀರ್ಪೊಂದನ್ನು ಉಲ್ಲೇಖಿಸಿ ಪ್ರಕರಣ ರದ್ದುಪಡಿಸುವಂತೆ ಕೋರಿದರು.
ವಾದ ಪರಿಗಣಿಸಲು ಸುಪ್ರೀಂಕೋರ್ಟ್ ನಿರಾಕರಿಸಿದ ಹಂತದಲ್ಲಿ, ಡಿಕೆಶಿ ಪರ ವಕೀಲರು ವಿವರಣೆ ನೀಡಿ, ಅರ್ಜಿದಾರರ ವಿರುದ್ಧ ಇದೇ ವಿಷಯಕ್ಕೆ ಸಂಬಂಧಿಸಿದಂತೆ ಆದಾಯ ತೆರಿಗೆ ಇಲಾಖೆಯೂ ತನಿಖೆ ನಡೆಸುತ್ತಿದೆ ಎಂದರು.
ಇದಕ್ಕೆ ಪ್ರತಿಕ್ರಿಯಿಸಿ ಸುಪ್ರೀಂಕೋರ್ಟ್, ಅರ್ಜಿದಾರರ ವಿರುದ್ಧ ಭ್ರಷ್ಟಾಚಾರ ತಡೆ ಕಾಯ್ದೆ ಅಡಿ ತನಿಖೆ ನಡೆಯುತ್ತಿದೆ. ಆದಾಯ ತೆರಿಗೆ ಇಲಾಖೆಯು ಭ್ರಷ್ಟಾಚಾರ ತಡೆ ಕಾಯ್ದೆ ಅಡಿ ತನಿಖೆ ಮಾಡಲಾಗದು. ಹೀಗಾಗಿ, ಈ ವಿಚಾರದಲ್ಲಿ ನಾವು ಮಧ್ಯಪ್ರವೇಶಿಸಲು ಸಾಧ್ಯವಿಲ್ಲ ಎಂದು ಅಭಿಪ್ರಾಯಪಟ್ಟು, ಡಿಕೆಶಿ ಸಲ್ಲಿಸಿದ್ದ ಅರ್ಜಿಯನ್ನು ವಜಾ ಮಾಡಿದೆ.
ಪ್ರಕರಣದ ಹಿನ್ನೆಲೆ: ಡಿಕೆ ಶಿವಕುಮಾರ್ ಅವರು ಆದಾಯ ಮೀರಿದ ಆಸ್ತಿ ಗಳಿಸಿದ್ದಾರೆ ಎಂಬ ಆರೋಪದಡಿ ಸಿಬಿಐ 2020ರ ಅಕ್ಟೋಬರ್ 3ರಂದು ಪ್ರಕರಣ ದಾಖಲಿಸಿದೆ. 2013ರಲ್ಲಿ ಡಿಕೆಶಿ ಕುಟುಂಬದ ಚರ ಮತ್ತು ಸ್ಥಿರ ಆಸ್ತಿ 33.92 ಕೋಟಿ ಇದ್ದು, ನಂತರ ವ್ಯಾಪಕವಾಗಿ ಏರಿಕೆಯಾಗಿದೆ ಎಂದು ಸಿಬಿಐ ಆರೋಪಿಸಿದೆ.
ಈ ಹಿನ್ನೆಲೆಯಲ್ಲಿ ಸಿಬಿಐ ತನಿಖೆಗೆ ಅನುಮತಿಸಿದ್ದ ರಾಜ್ಯ (ಬಿಜೆಪಿ) ಸರ್ಕಾರದ ಆದೇಶ ಪ್ರಶ್ನಿಸಿ ಡಿಕೆಶಿ ಹೈಕೋರ್ಟ್ ಮೆಟ್ಟಿಲೇರಿದ್ದರು. 2023ರ ಅಕ್ಟೋಬರ್ನಲ್ಲಿ ಹೈಕೋರ್ಟ್ ಏಕಸದಸ್ಯ ಪೀಠ ಸಿಬಿಐ ತನಿಖೆ ಪ್ರಶ್ನಿಸಿದ್ದ ಅರ್ಜಿಯನ್ನು ವಜಾ ಮಾಡಿತ್ತು.
ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ ನಂತರ ಸಿಬಿಐಗೆ ನೀಡಿದ್ದ ಅನುಮತಿಯನ್ನು ಹಿಂಪಡೆದಿದೆ. ಸಿಬಿಐ ತನಿಖೆಗೆ ನೀಡಿದ್ದ ಅನುಮತಿ ಹಿಂಪಡೆದ ರಾಜ್ಯ ಸರ್ಕಾರದ ಆದೇಶವನ್ನು ಪ್ರಶ್ನಿಸಿ ಸಿಬಿಐ ಹಾಗು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೈಕೋರ್ಟ್ ವಿಭಾಗೀಯ ಪೀಠದಲ್ಲಿ ಪ್ರಶ್ನಿಸಿದ್ದಾರೆ. ಪ್ರಕರಣದ ವಿಚಾರಣೆ ಪೂರ್ಣಗೊಂಡಿದ್ದು, ತೀರ್ಪು ಕಾಯ್ದಿರಿಸಲಾಗಿದೆ.