ಬೆಂಗಳೂರು: ಹಾಸನ ಲೋಕಸಭಾ ಕ್ಷೇತ್ರದಿಂದ ಚುನಾಯಿತರಾಗಿರುವ ಕಾಂಗ್ರೆಸ್ ಪಕ್ಷದ ಸಂಸದ ಶ್ರೇಯಸ್ ಪಟೇಲ್ ಹಾಗು ದಾವಣಗೆರೆ ಕ್ಷೇತ್ರದಿಂದ ಚುನಾಯಿತರಾಗಿರುವ ಡಾ. ಪ್ರಭಾ ಮಲ್ಲಿಕಾರ್ಜುನ್ ಅವರ ಆಯ್ಕೆಯನ್ನು ಅಸಿಂಧುಗೊಳಿಸುವಂತೆ ಕೋರಿ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಲಾಗಿದೆ.
ಈ ಕುರಿತಂತೆ ಗುರುವಾರ ಎರಡು ಪ್ರತ್ಯೇಕ ಚುನಾವಣಾ ಅರ್ಜಿಗಳನ್ನು ಸಲ್ಲಿಸಲಾಗಿದ್ದು, ಅರ್ಜಿಗಳು ವಿಚಾರಣೆಗೆ ನಿಗದಿಯಾಗಬೇಕಿದೆ.
ಹಾಸನ ಸಂಸದ ಶ್ರೇಯಸ್ ಪಟೇಲ್ ನಾಮಪತ್ರ ಕ್ರಮಬದ್ಧವಾಗಿಲ್ಲ ಹಾಗೂ ಹಿಂದಿನ ಐದು ವರ್ಷಗಳ ಆದಾಯ ತೆರಿಗೆ ರಿಟರ್ನ್ಸ್ ಸಲ್ಲಿಸಿಲ್ಲ. ಚುನಾವಣಾ ವೆಚ್ಚದ ಬಗ್ಗೆಯೂ ತಪ್ಪು ಮಾಹಿತಿ ನೀಡಿದ್ದಾರೆ. ನಿಗದಿಗಿಂತ ಹೆಚ್ಚಿನ ಹಣ ಖರ್ಚು ಮಾಡಿದ್ದಾರೆ. ಆ ಕುರಿತು ಸರಿಯಾದ ಲೆಕ್ಕವನ್ನು ಆಯೋಗಕ್ಕೆ ಸಲ್ಲಿಕೆ ಮಾಡಿಲ್ಲ. ಹೀಗಾಗಿ ಅವರ ಆಯ್ಕೆಯನ್ನು ಅಸಿಂಧುಗೊಳಿಸಬೇಕು ಎಂದು ಕೋರಿ ವಕೀಲ ಜಿ ದೇವರಾಜೇಗೌಡ ಪುತ್ರ ಡಿ.ಚರಣ್ ಚುನಾವಣಾ ತಕರಾರು ಅರ್ಜಿ ಸಲ್ಲಿಸಿದ್ದಾರೆ.
ದಾವಣಗೆರೆ ಸಂಸದರಾಗಿರುವ ಡಾ. ಪ್ರಭಾ ಮಲ್ಲಿಕಾರ್ಜುನ ಅವರು ಪ್ರಭಾ ಮಲ್ಲಿಕಾರ್ಜುನ್ ಅವರು ಕಾಗ್ರೆಸ್ ಪಕ್ಷದ ಗ್ಯಾರಂಟಿ ಕಾರ್ಡ್ ವಿತರಿಸಿ ಮತದಾರರಿಗೆ ಆಮಿಷವೊಡ್ಡಿದ್ದಾರೆ. ಅಲ್ಲದೇ, ಮಹಿಳೆಯರಿಗೆ 1 ಲಕ್ಷ ಕೊಡುವುದಾಗಿ ಭರವಸೆ ನೀಡಿದ್ದಾರೆ. ಇದು ಪ್ರಜಾಪ್ರತಿನಿಧಿ ಕಾಯ್ದೆ–1951ರ ಸೆಕ್ಷನ್ 123(1), 123(2), 123(4) ಮತ್ತು 123(6)ಕ್ಕೆ ವಿರುದ್ಧವಾಗಿದೆ. ಆದ್ದರಿಂದ ಪ್ರಭಾ ಮಲ್ಲಿಕಾರ್ಜುನ್ ಅವರ ಆಯ್ಕೆ ಅಸಿಂಧುಗೊಳಿಸಬೇಕು ಎಂದು ಕೋರಿ ಬಿಜೆಪಿಯ ಪರಾಜಿತ ಅಭ್ಯರ್ಥಿ ಜಿ.ಎಸ್. ಗಾಯತ್ರಿ ಸಿದ್ದೇಶ್ವರ ಅರ್ಜಿಯಲ್ಲಿ ಮನವಿ ಮಾಡಿದ್ದಾರೆ.