News

ಪೋಕ್ಸೊ ಕೇಸ್: ಯಡಿಯೂರಪ್ಪ ಬಂಧಿಸದಂತೆ ಆದೇಶ ವಿಸ್ತರಿಸಿದ ಹೈಕೋರ್ಟ್

Share It

ಬೆಂಗಳೂರು: ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಡಿ ದಾಖಲಿಸಿರುವ ಕೇಸಿನಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಬಂಧಿಸದಂತೆ ಈ ಹಿಂದೆ ನೀಡಿದ್ದ ಮಧ್ಯಂತರ ಆದೇಶವನ್ನು ಹೈಕೋರ್ಟ್ ವಿಸ್ತರಿಸಿದೆ.

ತಮ್ಮ ವಿರುದ್ಧ ದಾಖಲಿಸಿರುವ ಪೋಕ್ಸೊ ಪ್ರಕರಣ ರದ್ದುಪಡಿಸುವಂತೆ ಕೋರಿ ಮತ್ತು ನಿರೀಕ್ಷಣಾ ಜಾಮೀನು ಕೋರಿ ಯಡಿಯೂರಪ್ಪ ಸಲ್ಲಿಸಿದ್ದ ಅರ್ಜಿಯ ಸಂಬಂಧ ಬಂಧಿಸದಂತೆ ನೀಡಿರುವ ಆದೇಶ ತೆರವು ಕೋರಿ ಸಿಐಡಿ ಸಲ್ಲಿಸಿದ್ದ ಮಧ್ಯಂತರ ಅರ್ಜಿ ವಿಚಾರಣೆ ನಡೆಸಿದ ನ್ಯಾ. ಎಂ.ನಾಗಪ್ರಸನ್ನ ಅವರಿದ್ದ ಪೀಠ ಈ ಆದೇಶ ನೀಡಿದೆ.

ಗುರುವಾರ ಅರ್ಜಿಯ ವಿಚಾರಣೆ ವೇಳೆ ಸಿಐಡಿ ಪರ ವಕೀಲರು, ಯಡಿಯೂರಪ್ಪ ಅವರನ್ನು ಬಂಧಿಸದಂತೆ ವಿಧಿಸಿರುವ ಆದೇಶ ತೆರವುಗೊಳಿಸಲು ಕೋರಿ ಆಕ್ಷೇಪಣೆ ಸಲ್ಲಿಸಿದರು. ಈ ಆಕ್ಷೇಪಣೆಗೆ ಪ್ರತಿ ಆಕ್ಷೇಪಣೆ ಸಲ್ಲಿಸಲು ಬಿಎಸ್​ವೈ ಪರ ವಕೀಲರು ಕಾಲಾವಕಾಶ ಕೋರಿದರು. ಇದನ್ನು ಪರಿಗಣಿಸಿದ ನ್ಯಾಯಪೀಠ ವಿಚಾರಣೆಯನ್ನು ಮುಂದೂಡಿದೆ. ಜೊತೆಗೆ ಆರೋಪಿಯನ್ನು
ಬಂಧಿಸದಂತೆ ನ್ಯಾಯಪೀಠ ಈ ಹಿಂದೆ ಹೊರಡಿಸಿದ್ದ ಆದೇಶ ವಿಸ್ತರಿಸಿ ವಿಚಾರಣೆಯನ್ನು ಆಗಸ್ಟ್ 30 ಕ್ಕೆ ನಿಗದಿ ಪಡಿಸಿತು.

ಪ್ರಕರಣದ ಹಿನ್ನೆಲೆ: ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ 2024ರ ಮಾರ್ಚ್ 3ರಂದು ಬಿಎಸ್​ವೈ ವಿರುದ್ಧ ಬೆಂಗಳೂರಿನ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ಪೋಕ್ಸೊ ಕಾಯ್ದೆ ಅಡಿ ಎಫ್ಐಆರ್ ದಾಖಲಿಸಲಾಗಿದೆ. ಸಂತ್ರಸ್ತೆಯ ತಾಯಿ ನೀಡಿದ ದೂರಿನ ಮೇರೆಗೆ ಎಫ್‌ಐಆರ್ ದಾಖಲಿಸಲಾಗಿದೆ. ಪ್ರಕರಣದ ಗಂಭೀರತೆ ಪರಿಗಣಿಸಿ ಸರ್ಕಾರವು ತನಿಖೆಯನ್ನು ಸಿಐಡಿಗೆ ವರ್ಗಾವಣೆ ಮಾಡಿತ್ತು.

ಸಿಐಡಿ ಅಧಿಕಾರಿಗಳು ಯಡಿಯೂರಪ್ಪ ಅವರಿಗೆ ನೋಟಿಸ್ ನೀಡಿ, ವಿಚಾರಣೆಗೆ ಹಾಜರಾಗಲು ಸೂಚಿಸಿದ್ದರು. ಅದರಂತೆ ಯಡಿಯೂರಪ್ಪ ವಿಚಾರಣೆಗೆ ಹಾಜರಾಗಿ ತಮ್ಮ ಹೇಳಿಕೆಗಳನ್ನು ನೀಡಿದ್ದರು. ಈ ನಡುವೆ ತಮ್ಮ ವಿರುದ್ಧದ ಪ್ರಕರಣ ರದ್ದು ಕೋರಿ ಮತ್ತು ನಿರೀಕ್ಷಣಾ ಜಾಮೀನು ಮಂಜೂರು ಮಾಡುವಂತೆ ಕೋರಿ ಯಡಿಯೂರಪ್ಪ ಹೈಕೋರ್ಟ್‌ಗೆ ಎರಡು ಪ್ರತ್ಯೇಕ ಅರ್ಜಿಗಳನ್ನು ಸಲ್ಲಿಸಿದ್ದಾರೆ.

ಈ ಮೊದಲು ಈ ಅರ್ಜಿಯ ವಿಚಾರಣೆ ನಡೆಸಿದ್ದ ನ್ಯಾಯಾಲಯ, ಯಡಿಯೂರಪ್ಪ ಅವರನ್ನು ಬಂಧಿಸದಂತೆ ಮತ್ತು ಖುದ್ದು ವಿಚಾರಣೆಗೆ ವಿನಾಯಿತಿ ನೀಡಿ ಆದೇಶಿಸಿತ್ತು. ಇದನ್ನು ಪ್ರಶ್ನಿಸಿ ಸಿಐಡಿ ಮಧ್ಯಂತರ ಅರ್ಜಿ ಸಲ್ಲಿಸಿತ್ತು.

750 ಪುಟಗಳ ಚಾರ್ಜ್​ಶೀಟ್: ಇನ್ನು ಪೋಕ್ಸೊ ಪ್ರಕರಣ ಸಂಬಂಧ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ವಿರುದ್ಧ ಸಿಐಡಿ ಅಧಿಕಾರಿಗಳು ಈಗಾಗಲೇ ಒಂದನೇ ತ್ವರಿತಗತಿ ವಿಶೇಷ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದಾರೆ. ಸುಮಾರು 750 ಪುಟಗಳಿರುವ ಚಾರ್ಜ್‌ಶೀಟ್ ಇದಾಗಿದ್ದು, 75 ಮಂದಿಯನ್ನು ಸಾಕ್ಷಿಗಳಾಗಿ ಪರಿಗಣಿಸಲಾಗಿದೆ ಎಂದು ತಿಳಿದು ಬಂದಿದೆ.


Share It

You cannot copy content of this page