ಬೆಂಗಳೂರು: ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಡಿಸಿಎಂ ಡಿ.ಕೆ ಶಿವಕುಮಾರ್ ವಿರುದ್ಧ ಸಿಬಿಐ ಮತ್ತು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಸಲ್ಲಿಸಿದ್ದ ಅರ್ಜಿಗಳನ್ನು ಹೈಕೋರ್ಟ್ ವಜಾಗೊಳಿಸಿದೆ.
ರಾಜ್ಯ ಸರ್ಕಾರ, ಸಿಬಿಐ ನಡುವಿನ ವಿವಾದವಾಗಿದೆ. ಹೀಗಾಗಿ ಸುಪ್ರೀಂಕೋರ್ಟ್ನಲ್ಲಿ ಅರ್ಜಿ ವಿಚಾರಣೆ ಸೂಕ್ತ. ಸರ್ಕಾರ, ಸಿಬಿಐ ನಡುವಿನ ವಿವಾದ ಸುಪ್ರೀಂಕೋರ್ಟ್ ತೀರ್ಮಾನಿಸಬೇಕು. ಹೈಕೋರ್ಟ್ ತೀರ್ಮಾನಿಸುವುದು ಸೂಕ್ತವಲ್ಲವೆಂದು ನ್ಯಾಯಮೂರ್ತಿ ಕೆ.ಸೋಮಶೇಖರ್, ನ್ಯಾಯಮೂರ್ತಿ ಉಮೇಶ್ ಎಂ.ಅಡಿಗ ಅವರಿದ್ದ ಪೀಠ ತೀರ್ಪು ನೀಡಿದೆ. ಇದರೊಂದಿಗೆ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರಿಗೆ ಬಿಗ್ ರಿಲೀಫ್ ಸಿಕ್ಕಿದೆ.
ಸಿಬಿಐ ತನಿಖೆಗೆ ನೀಡಿದ್ದ ಸಮ್ಮತಿಯನ್ನು ಕಾಂಗ್ರೆಸ್ ಸರ್ಕಾರ ಹಿಂಪಡೆದ ಬಗ್ಗೆ ನಿರ್ಣಯಿಸದೇ ಸುಪ್ರೀಂಕೋರ್ಟ್ನಲ್ಲಿ ಅರ್ಜಿ ವಿಚಾರಣೆ ಸೂಕ್ತ ಎಂದಿದೆ. ಪ್ರಕರಣದಲ್ಲಿನ ಕಾನೂನು ವಿಚಾರಗಳು ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ವ್ಯಾಪ್ತಿಗೆ ಸಂಬಂಧಿಸಿರುವುರಿಂದ ಇದನ್ನು ಸಂವಿಧಾನದ 131ನೇ ವಿಧಿಯಡಿ ಸುಪ್ರೀಂ ಕೋರ್ಟ್ ನಿರ್ಧರಿಸುವುದು ಸೂಕ್ತವಾಗಿದೆ ಎಂದಿದೆ. ಹೀಗಾಗಿ ಅಂತಿಮವಾಗಿ ಸುಪ್ರೀಂಕೋರ್ಟ್ ಈ ಬಗ್ಗೆ ತೀರ್ಮಾನಿಸಬೇಕಿದೆ. ಇನ್ನು ಸಿಬಿಐ ಮತ್ತು ಯತ್ನಾಳ ಅರ್ಜಿಗಳನ್ನು ವಜಾ ಮಾಡಿದ ಹೈಕೋರ್ಟ್, ಅರ್ಜಿದಾರರು ಅಗತ್ಯವಿದ್ದರೆ ಮೇಲ್ಮನವಿ ಸಲ್ಲಿಸಬಹುದು ಎಂದು ಸ್ಪಷ್ಟಪಡಿಸಿದೆ.
ಡಿ.ಕೆ ಶಿವಕುಮಾರ್ ವಿರುದ್ಧದ ಅಕ್ರಮ ಆಸ್ತಿ ಗಳಿಕೆ ಪ್ರಕರಣದ ತನಿಖೆಯನ್ನು ರಾಜ್ಯ ಸರ್ಕಾರ ಹಿಂಪಡೆದಿರುವುದನ್ನು ಪ್ರಶ್ನಿಸಿ ಸಿಬಿಐ ಮತ್ತು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೈಕೋರ್ಟ್ ಮೆಟ್ಟಿಲೇರಿದ್ದರು. ಎರಡೂ ಅರ್ಜಿ ವಿಚಾರಣೆ ನಡೆಸಿದ್ದ ಹೈಕೋರ್ಟ್ ವಿಭಾಗೀಯ ಪೀಠ ಆದೇಶವನ್ನು ಇಂದಿಗೆ ಕಾಯ್ದಿರಿಸಿತ್ತು.
ಪ್ರಕರಣದ ಹಿನ್ನೆಲೆ: ರಾಜ್ಯ ಸರ್ಕಾರದ ಸಮ್ಮತಿ ಪಡೆದು ಸಿಬಿಐ ಡಿಕೆ ಶಿವಕುಮಾರ್ ವಿರುದ್ಧ ಪ್ರಕರಣ ದಾಖಲಿಸಿದೆ. ಡಿ.ಕೆ ಶಿವಕುಮಾರ್ 2013-2018 ರ ಅವಧಿಯಲ್ಲಿ ಅಕ್ರಮವಾಗಿ ಮಿತಿ ಮೀರಿದ ಆದಾಯ ಗಳಿಸಿದ್ದಾರೆಂದು ಆರೋಪಿಸಿ ಸಿಬಿಐ ಎಫ್‌ಐಆರ್ ದಾಖಲಿಸಿದೆ. ಸಿಬಿಐ ಎಫ್ಐಆರ್ ದಾಖಲಿಸಿದರ ಕ್ರಮ ಪ್ರಶ್ನಿಸಿ ಡಿಕೆ ಶಿವಕುಮಾರ್ ಹೈಕೋರ್ಟ್ ಗೆ ರಿಟ್ ಅರ್ಜಿ ಸಲ್ಲಿಸಿದ್ದರು. ಏಕಸದಸ್ಯ ಪೀಠ ರಿಟ್ ಅರ್ಜಿ ವಜಾಗೊಳಿಸಿತ್ತು. ನಂತರ ಡಿಕೆ ಶಿವಕುಮಾರ್ ವಿಭಾಗೀಯ ಪೀಠಕ್ಕೆ ಮೇಲ್ಮನವಿ ಸಲ್ಲಿಸಿದ್ದರು. ಬಳಿಕ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಸಿಬಿಐ ತನಿಖೆಗೆ ನೀಡಿದ್ದ ಸಮ್ಮತಿ ಹಿಂಪಡೆದು, ಲೋಕಾಯುಕ್ತ ತನಿಖೆಗೆ ನಿರ್ಧರಿಸಿತ್ತು. ಇದನ್ನು ಪ್ರಶ್ನಿಸಿ ಸಿಬಿಐ, ಯತ್ನಾಳ್ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು.
(WP 27220/2023 c/w WP 670/2024)