ಬೆಂಗಳೂರು: ರಾಜ್ಯದ ತಾಲೂಕು ಪಂಚಾಯತ್ ಹಾಗೂ ಜಿಲ್ಲಾ ಪಂಚಾಯತ್ ಕ್ಷೇತ್ರಗಳಿಗೆ ನಡೆಸಬೇಕಿರುವ ಚುನಾವಣೆ ಸಂಬಂಧ ಮೀಸಲಾತಿ ನಿಗದಿಪಡಿಸಲು ರಾಜ್ಯ ಸರ್ಕಾರ ಮತ್ತೊಮ್ಮೆ ಕಾಲಾವಕಾಶ ಕೇಳಿದೆ.
ನ್ಯಾಯಾಲಯಕ್ಕೆ ನೀಡಿದ ಭರವಸೆಯಂತೆ ನಿಗದಿತ ಅವಧಿಯಲ್ಲಿ ಜಿಲ್ಲಾ ಪಂಚಾಯ್ತಿ ತಾಲೂಕು ಪಂಚಾಯ್ತಿ ಕ್ಷೇತ್ರ ಪುನರ್‌ವಿಂಗಡಣೆ ಹಾಗೂ ಮೀಸಲಾತಿ ಪ್ರಕಟಿಸಲು ಸರ್ಕಾರ ವಿಫಲವಾಗಿದೆ. ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರದ ವಿರುದ್ಧ ರಾಜ್ಯ ಚುನಾವಣಾ ಆಯೋಗ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಸಿದೆ.
ಇದರ ಜೊತೆಗೆ, ನಗರ ಸ್ಥಳೀಯ ಸಂಸ್ಥೆಗಳ ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನದ ಮೀಸಲಾತಿ ಪ್ರಕಟಿಸಲು ಏಕಸದಸ್ಯ ನ್ಯಾಯಪೀಠ ನೀಡಿದ ಆದೇಶ ಪಾಲಿಸುವಲ್ಲಿ ಸರ್ಕಾರ ವಿಫಲವಾಗಿದೆ ಎಂದು ಚುನಾವಣಾ ಆಯೋಗ 2023ರಲ್ಲಿ ಮತ್ತೊಂದು ಪ್ರತ್ಯೇಕ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಸಿದೆ.
ಈ ಅರ್ಜಿಗಳನ್ನು ವಿಚಾರಣೆ ನಡೆಸಿದ ನ್ಯಾಯಮೂರ್ತಿ ವಿ.ಕಾಮೇಶ್ವರ್ ರಾವ್ ಹಾಗೂ ನ್ಯಾಯಮೂರ್ತಿ ಕೆ. ರಾಜೇಶ್ ರೈ ಅವರಿದ್ದ ವಿಭಾಗೀಯ ಪೀಠಕ್ಕೆ ರಾಜ್ಯ ಸರ್ಕಾರ ಇನ್ನಷ್ಟು ಕಾಲಾವಕಾಶ ನೀಡುವಂತೆ ಮನವಿ ಮಾಡಿದೆ.
ವಿಚಾರಣೆ ವೇಳೆ ರಾಜ್ಯ ಸರ್ಕಾರದ ಪರ ಹೆಚ್ಚುವರಿ ಅಡ್ವೋಕೇಟ್ ಜನರಲ್ ಅವರು, ಎಲ್ಲಾ 31 ಜಿಲ್ಲೆಗಳಲ್ಲಿ ಜಿಲ್ಲಾ ಪಂಚಾಯ್ತಿ ತಾಲೂಕು ಪಂಚಾಯ್ತಿ ಕ್ಷೇತ್ರಗಳ ಪುನರ್‌ವಿಂಗಡಣೆ ಕಾರ್ಯ ಮುಗಿದಿದೆ. ಈಗ ಮೀಸಲಾತಿ ನಿಗದಿಪಡಿಸುವ ಕಾರ್ಯ ಪ್ರಗತಿಯಲ್ಲಿದೆ. ಅದಕ್ಕಾಗಿ ಮೂರು ವಾರ ಕಾಲಾವಕಾಶ ನೀಡುವಂತೆ ಮನವಿ ಮಾಡಿದರು. ಮನವಿ ದಾಖಲಿಸಿಕೊಂಡ ನ್ಯಾಯಪೀಠ, ವಿಚಾರಣೆಯನ್ನು ಸೆಪ್ಟಂಬರ್ 30ಕ್ಕೆ ಮುಂದೂಡಿದೆ.
ಜಿ.ಪಂ ಹಾಗೂ ತಾ.ಪಂ ಕ್ಷೇತ್ರಗಳಿಗೆ 12 ವಾರಗಳಲ್ಲಿ ಮೀಸಲಾತಿ ಪ್ರಕಟಿಸಲಾಗುವುದು ಎಂದು ರಾಜ್ಯ ಸರ್ಕಾರ 2023ರ ಡಿಸೆಂಬರ್ 19ಕ್ಕೆ ನ್ಯಾಯಾಲಯಕ್ಕೆ ಭರವಸೆ ಕೊಟ್ಟಿತ್ತು. ಅದನ್ನು ಪಾಲಿಸಿಲ್ಲ ಎಂದು ರಾಜ್ಯ ಚುನಾವಣಾ ಆಯೋಗ ರಾಜ್ಯ ಸರ್ಕಾರದ ವಿರುದ್ಧ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಸಿದೆ.