ಬೆಂಗಳೂರು: ರಾಷ್ಟ್ರೀಯ ಹೆದ್ದಾರಿಯ ಮಧ್ಯಭಾಗದಿಂದ 40 ಮೀಟರ್ ಹಾಗೂ ರಾಜ್ಯ ಹೆದ್ದಾರಿಯ ಮಧ್ಯಭಾಗದಿಂದ 40 ಮೀಟರ್ ವ್ಯಾಪ್ತಿಯೊಳಗೆ ಯಾವುದೇ ಕಟ್ಟಡ ನಿರ್ಮಾಣ ಮಾಡುವಂತಿಲ್ಲ ಎಂಬ ನಿಯಮವನ್ನು ಹೈಕೋರ್ಟ್ ಎತ್ತಿಹಿಡಿದಿದೆ.
ಉಡುಪಿಯಲ್ಲಿ ರಾಷ್ಟ್ರೀಯ ಹೆದ್ದಾರಿ 66ರ ಕಂಟ್ರೋಲಿಂಗ್ ಲೈನ್ ವ್ಯಾಪ್ತಿಯಲ್ಲಿ ಕೆಲ ಸ್ಥಳೀಯ ವ್ಯಕ್ತಿಗಳು ಅನಧಿಕೃತವಾಗಿ ನಿರ್ಮಿಸಿರುವ ಕಟ್ಟಡ ತೆರವು ಕೋರಿ ಅರ್ಜಿ ಸಲ್ಲಿಸಲಾಗಿತ್ತು. ಈ ಅರ್ಜಿಯನ್ನು ವಿಚಾರಣೆ ನಡೆಸಿದ ಹೈಕೋರ್ಟ್ ವಿಭಾಗೀಯ ಪೀಠ ಈ ಮಹತ್ವದ ತೀರ್ಪು ನೀಡಿದೆ.
ಸರ್ಕಾರದ ಸುತ್ತೋಲೆ: ರಾಜ್ಯ ಸರ್ಕಾರ 2005 ರ ಡಿಸೆಂಬರ್ 22ರಂದು ಹೊರಡಿಸಿರುವ ಸುತ್ತೋಲೆ ಪ್ರಕಾರ ರಾಷ್ಟ್ರೀಯ ಹೆದ್ದಾರಿಯ ಮಧ್ಯಭಾಗದಿಂದ 40 ಮೀಟರ್ ಮತ್ತು ಮುಖ್ಯ ಜಿಲ್ಲಾ ರಸ್ತೆಗಳ ಮಧ್ಯಭಾಗದಿಂದ 25 ಮೀಟರ್ ವ್ಯಾಪ್ತಿಯಲ್ಲಿ ಯಾವುದೇ ಕಟ್ಟಡ ನಿರ್ಮಿಸುವಂತಿಲ್ಲ. ನಿಯಮಗಳ ಪ್ರಕಾರ ರಾಷ್ಟ್ರೀಯ ಹೆದ್ದಾರಿ ಮಧ್ಯಭಾಗದಿಂದ 45 ಮೀಟರ್ ವರೆಗಿನ ಜಾಗ ಕಂಟ್ರೋಲಿಂಗ್ ಲೈನ್ ಆಗಿರುತ್ತದೆ ಎಂದು ಸ್ಪಷ್ಟಪಡಿಸಿದೆ.
ಪ್ರಕರಣದ ಹಿನ್ನೆಲೆ: ಉಡುಪಿ ಜಿಲ್ಲೆ ಕಾಪು ತಾಲೂಕಿನ ನಡ್ಸಲ್ ಗ್ರಾಮದ ಸರ್ವೆ ನಂಬರ್ 47/2 ಹಾಗೂ 47/7 ರಲ್ಲಿ ಕೆಲ ವ್ಯಕ್ತಿಗಳು ಹೆದ್ದಾರಿ 66ರ ಮಧ್ಯಭಾಗದಿಂದ 22.08 ಮೀಟರ್ ದೂರದಲ್ಲಿ ಎರಡು ಮಹಡಿಯ ಕಟ್ಟಡ ನಿರ್ಮಿಸಿದ್ದರು. ಕಂಟ್ರೋಲಿಂಗ್ ಲೈನ್ ಒಳಭಾಗದಲ್ಲಿ ಕಟ್ಟಡ ನಿರ್ಮಿಸಲು ಪಡುಬಿದ್ರಿ ಗ್ರಾಮ ಪಂಚಾಯ್ತಿ ಅನುಮತಿ ನೀಡಿತ್ತು. ನಿಯಮಬಾಹಿರವಾಗಿ ಕಟ್ಟಡ ನಿರ್ಮಾಣ ಮಾಡಿದ್ದರೂ ಸಂಬಂಧಪಟ್ಟ ಅಧಿಕಾರಿಗಳು ಯಾವುದೇ ಕ್ರಮ ಜರುಗಿಸಿಲ್ಲ ಎಂದು ಅರ್ಜಿದಾರರು ಹೈಕೋರ್ಟ್ ಮೆಟ್ಟಿಲೇರಿದ್ದರು.
ಅರ್ಜಿದಾರರ ಮನವಿ ಪುರಸ್ಕರಿಸಿರುವ ಹೈಕೋರ್ಟ್ ಸರ್ಕಾರದ ಸುತ್ತೋಲೆಯನ್ನು ಎತ್ತಿಹಿಡಿದಿದೆ. ನಿರ್ಬಂಧಿತ ಪ್ರದೇಶದಲ್ಲಿ ಯಾವುದೇ ಕಟ್ಟಡ ನಿರ್ಮಾಣ ಮಾಡಬಾರದು. ಈ ಪ್ರದೇಶವನ್ನು ಕಟ್ಟಡ ರಹಿತ ವಲಯವಾಗಿ ಅಂತರ ಕಾಯ್ದುಕೊಳ್ಳಬೇಕು ಎಂದು ಆದೇಶಿಸಿದೆ. ಜತೆಗೆ, ಪ್ರಕರಣದಲ್ಲಿ ಅನಧಿಕೃತವಾಗಿ ನಿರ್ಮಿಸಿರುವ ಕಟ್ಟಡವನ್ನು 60 ದಿನಗಳಲ್ಲಿ ತೆರವುಗೊಳಿಸಬೇಕು. ಕಟ್ಟಡ ನಿರ್ಮಾಣಕ್ಕೆ ಲಿಖಿತ ಅನುಮತಿ ನೀಡಿದ ಕುರಿತು 15 ದಿನಗಳಲ್ಲಿ ಪರಿಶೀಲನೆ ನಡೆಸಿ, ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಆದೇಶಿಸಿದೆ.
(WP 36314/2019)