ಪೊಲೀಸರಿಂದ ಹಲ್ಲೆಗೊಳಗಾಗಿದ್ದ ವಕೀಲ ಕುಲದೀಪ್ ಶೆಟ್ಟಿ ಅವರಿಗೆ 3 ಲಕ್ಷ ಪರಿಹಾರ ನೀಡುವಂತೆ ಹಾಗೂ ಈ ಹಣವನ್ನು ತಪ್ಪಿತಸ್ಥ ಪೊಲೀಸರಿಂದ ವಸೂಲಿ ಮಾಡುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ಆದೇಶಿಸಿದೆ.
ಇದೇ ವೇಳೆ ವಕೀಲ ಕುಲದೀಪ್ ಮೇಲೆ ಹಲ್ಲೆ ಮಾಡಿದ ಪೊಲೀಸರ ವಿರುದ್ಧ ದಕ್ಷಿಣ ಕನ್ನಡ ಜಿಲ್ಲೆಯ ಪೊಲೀಸ್ ವರಿಷ್ಠಾಧಿಕಾರಿ ತನಿಖೆ ನಡೆಸಿ ಒಂದು ತಿಂಗಳಲ್ಲಿ ನ್ಯಾಯಾಲಯಕ್ಕೆ ವರದಿ ಸಲ್ಲಿಸಬೇಕು ಎಂದು ಹೈಕೋರ್ಟ್ ನಿರ್ದೇಶಿಸಿದೆ.
ತನ್ನ ಮೇಲೆ ಹಲ್ಲೆ ಮಾಡಿದ ಪೊಲೀಸರ ವಿರುದ್ಧ ತನಿಖೆ ನಡೆಸಲು ಸರ್ಕಾರಕ್ಕೆ ನಿರ್ದೇಶಿಸಬೇಕು ಹಾಗೂ ಪೊಲೀಸರ ಹಲ್ಲೆಯಿಂದ ದೈಹಿಕವಾಗಿ ಮತ್ತು ಮಾನಸಿಕವಾಗಿ ನೊಂದಿರುವ ತನಗೆ ಪರಿಹಾರ ಕೊಡಿಸಬೇಕು ಎಂದು ಕೋರಿ ವಕೀಲ ಕುಲದೀಪ್ ಹೈಕೋರ್ಟ್ ಅರ್ಜಿ ಸಲ್ಲಿಸಿದ್ದರು.
ಈ ಅರ್ಜಿ ವಿಚಾರಣೆ ನಡೆಸಿ ಕಾಯ್ದಿರಿಸಿದ್ದ ತೀರ್ಪನ್ನು ಇಂದು ಪ್ರಕಟಿಸಿರುವ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಪೀಠ ಅರ್ಜಿದಾರ ವಕೀಲ ಕುಲದೀಪ್ ಗೆ 3 ಲಕ್ಷ ಪರಿಹಾರ ನೀಡುವಂತೆ ಆದೇಶಿಸಿದೆ. ಹಾಗೆಯೇ ತಪ್ಪಿತಸ್ಥ ಪೊಲೀಸರ ವಿರುದ್ಧ ತನಿಖೆಗೆ ಆದೇಶಿಸಿದೆ.
ಜನವರಿ 10ರಂದು ಪ್ರಕರಣದ ವಿಚಾರಣೆ ನಡೆಸಿದ್ದ ಹೈಕೋರ್ಟ್, ಪೊಲೀಸರು ಸಿವಿಲ್ ದಾವೆಗಳಲ್ಲಿ ಮಧ್ಯಪ್ರವೇಶ ಮಾಡುತ್ತಿದ್ದಾರೆ. ಸಿವಿಲ್ ವ್ಯಾಜ್ಯಗಳಲ್ಲಿ ಪೊಲೀಸರ ಮಧ್ಯಪ್ರವೇಶಿಸಬಾರದು ಎಂಬ ರಾಜ್ಯ ಪೊಲೀಸ್ ಮಹಾನಿರ್ದೇಶಕರ ನಿರ್ದೇಶನ ಕೇವಲ ಕಾಗದಕ್ಕೆ ಸೀಮಿತವಾಗಿದೆ. ಮುಂದೆ ಇಂತಹುದೇ ನಡವಳಿಕೆ ಮುಂದುವರೆದರೆ ತಪ್ಪಿತಸ್ಥ ಪೊಲೀಸ್ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ ಮಾಡಬೇಕಾಗುತ್ತದೆ ಎಂದು ನ್ಯಾಯಾಲಯ ಪೊಲೀಸರಿಗೆ ಮೌಖಿಕವಾಗಿ ಎಚ್ಚರಿಕೆ ನೀಡಿತ್ತು.
ಹಿನ್ನೆಲೆ: ಕಳೆದ ತಿಂಗಳು ದಕ್ಷಿಣ ಕನ್ನಡ ಜಿಲ್ಲೆಯ ಪುಂಜಾಲಕಟ್ಟೆ ಪೊಲೀಸ್ ಠಾಣೆ ಪಿಎಸ್ಐ ಸುತೇಶ್ ಕೆ.ಪಿ ಹಾಗೂ ಸಿಬ್ಬಂದಿ ವಕೀಲ ಕುಲದೀಪ್ ಅವರನ್ನು ಬಂಧಿಸಿ, ಅಮಾನವೀಯವಾಗಿ ಹಲ್ಲೆ ನಡೆಸಿದ್ದರು. ಕುಲದೀಪ್ ಮೇಲಿನ ಹಲ್ಲೆ ಖಂಡಿಸಿ ವಕೀಲರ ಸಂಘಟನೆಗಳು ರಾಜ್ಯವ್ಯಾಪಿ ಪ್ರತಿಭಟನೆ ನಡೆಸಿದ್ದವು. ಕುಲದೀಪ್ ತನ್ನ ಮೇಲಿನ ಹಲ್ಲೆ ನಡೆಸಿದ ಅಧಿಕಾರಿಗಳ ವಿರುದ್ಧ ಕ್ರಮ ಕೋರಿ ದೂರು ನೀಡಿದ್ದರು. ಅದನ್ನು ಪೊಲೀಸರು ಪರಿಗಣಿಸದೇ ಹೋಗಿದ್ದರಿಂದ ಪರಿಹಾರ ಕೋರಿ ಹೈಕೋರ್ಟ್ ಮೆಟ್ಟಿಲೇರಿದ್ದರು.
ಪ್ರಕರಣ ಹೈಕೋರ್ಟ್ ಮೆಟ್ಟಿಲೇರಿದ ನಂತರ ಜನವರಿ 5ರಂದು ಪಿಎಸ್‌ಐ ಸುತೇಶ್ ಮತ್ತು ಇತರರ ವಿರುದ್ಧ ಐಪಿಸಿ ಸೆಕ್ಷನ್ 504, 506, 323, 324 ಜೊತೆಗೆ 34 ಅಡಿ ಎಫ್‌ಐಆರ್ ದಾಖಲಿಸಲಾಗಿತ್ತು.
(WP 24832/2022)