ಬೆಂಗಳೂರು: ಡೇ ಕೇರ್ ನಲ್ಲಿ ಮಕ್ಕಳನ್ನು ನೋಡಿಕೊಳ್ಳುವ ವ್ಯಕ್ತಿಯೇ 5 ವರ್ಷದ ಪುಟ್ಟ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ್ದ ಪ್ರಕರಣದಲ್ಲಿ ಬೆಂಗಳೂರಿನ ವಿಶೇಷ ನ್ಯಾಯಾಲಯ 20 ವರ್ಷ ಜೈಲು ಶಿಕ್ಷೆ ಹಾಗೂ 1 ಲಕ್ಷ ರೂಪಾಯಿ ದಂಡ ವಿಧಿಸಿ ಆದೇಶಿಸಿದೆ.
ಯಲಹಂಕ ಬಳಿಯ ಚಿಕ್ಕಬೊಮ್ಮಸಂದ್ರ ನಿವಾಸಿ 57 ವರ್ಷದ ಅಶ್ವತ್ಥನಾರಾಯಣರಾವ್ ಶಿಕ್ಷೆಗೆ ಗುರಿಯಾಗಿರುವ ಅಪರಾಧಿ. ಈತನ ವಿರುದ್ಧದ ಕೃತ್ಯ ಸಾಬೀತಾದ ಹಿನ್ನೆಲೆಯಲ್ಲಿ ನಗರದ ಎಫ್.ಟಿ.ಎಸ್.ಸಿ 1 ನೇ ನ್ಯಾಯಾಲಯದ ನ್ಯಾಯಾಧೀಶೆ ಕೆ.ಎನ್. ರೂಪ ಶಿಕ್ಷೆ ವಿಧಿಸಿ ಆದೇಶಿಸಿದ್ದಾರೆ.
7 ಲಕ್ಷ ರೂ ಪರಿಹಾರ: ಅಪರಾಧಿ ಅಶ್ವತ್ಥನಾರಾಯಣ ರಾವ್ ಗೆ ಪೋಕ್ಸೊ ಕಾಯ್ದೆಯ ಕಲಂ 6 ಅಡಿ 20 ವರ್ಷ ಸೆರೆವಾಸ ಹಾಗೂ 1 ಲಕ್ಷ ರೂಪಾಯಿ ದಂಡ ವಿಧಿಸಲಾಗಿದೆ. ಇದೇ ವೇಳೆ ಸಂತ್ರಸ್ತ ಬಾಲಕಿಯ ಭವಿಷ್ಯದ ಹಿತದೃಷ್ಟಿಯಿಂದ 7 ಲಕ್ಷ ರೂಪಾಯಿ ಪರಿಹಾರ ಮೊತ್ತ ಪಾವತಿಸುವಂತೆ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರಕ್ಕೆ ನ್ಯಾಯಾಲಯ ಆದೇಶಿಸಿದೆ. ಪ್ರಾಸಿಕ್ಯೂಷನ್ ಪರ ಸರ್ಕಾರಿ ಅಭಿಯೋಜಕರಾದ ಪಿ. ಕೃಷ್ಣವೇಣಿ ವಾದ ಮಂಡಿಸಿದ್ದರು.
ಪ್ರಕರಣದ ಹಿನ್ನೆಲೆ: ಪ್ರತಿ ದಿನ ಮಧ್ಯಾಹ್ನದ ಹೊತ್ತಿಗೆ ಶಾಲೆಯಿಂದ ಹಿಂದಿರುಗುತ್ತಿದ್ದ 5 ವರ್ಷದ ಬಾಲಕಿಯನ್ನು ಪೋಷಕರು ಸಮೀಪದ ಚಿಕ್ಕ ಮಕ್ಕಳ ಡೇ ಕೇರ್ ಸೆಂಟರ್ ಗೆ ಕಳುಹಿಸುತ್ತಿದ್ದರು. ಇಲ್ಲಿ ಮಕ್ಕಳನ್ನು ನೋಡಿಕೊಳ್ಳುತ್ತಿದ್ದ ಅಶ್ವತ್ಥನಾರಾಯಣ ರಾವ್ 2019 ರ ಆಗಸ್ಟ್ 30 ರಂದು ಮಗುವಿನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ ಎಂಬ ಆರೋಪ ಕೇಳಿಬಂದಿತ್ತು.
ಈ ಹಿನ್ನೆಲೆಯಲ್ಲಿ ಬಾಲಕಿಯ ಪೋಷಕರು ಯಲಹಂಕ ಉಪನಗರ ಪೊಲೀಸ್ ಠಾಣೆಗೆ ಆರೋಪಿ ವಿರುದ್ಧ ದೂರು ಸಲ್ಲಿಸಿದ್ದರು. ದೂರಿನ ಮೇರೆಗೆ ಎಫ್ಐಆರ್ ದಾಖಲಿಸಿಕೊಂಡಿದ್ದ ಪೊಲೀಸರು ತನಿಖೆ ನಡೆಸಿ ನ್ಯಾಯಾಲಯಕ್ಕೆ ದೋಷಾರೋಪಣೆ ಪಟ್ಟಿ ಸಲ್ಲಿಸಿದ್ದರು. ಪ್ರಕರಣದ ವಿಚಾರಣೆ ಕಾಲಕ್ಕೆ ಒಟ್ಟು 5 ಜನ ಸಾಕ್ಷಿದಾರರನ್ನು ಕೋರ್ಟ್ ವಿಚಾರಣೆ ನಡೆಸಿ, ಆರೋಪಿಯ ವಿರುದ್ಧ ಆರೋಪ ಸಾಬೀತಾದ ಹಿನ್ನಲೆಯಲ್ಲಿ ಶಿಕ್ಷೆ ವಿಧಿಸಿ ಆದೇಶಿಸಿದೆ.